

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಕಸರತ್ತು ನಡೆಯುತ್ತಿದೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶುರುವಾಗಿದೆ. ಏತನ್ಮಧ್ಯೆ, ಮಿತ್ರ ಪಕ್ಷ ಲೋಕಜನಶಕ್ತಿ ಪಾರ್ಟಿ (ಎಲ್ಜೆಪಿ) ಬಿಹಾರದ ಮಟ್ಟಿಗೆ ಮೈತ್ರಿಕೂಟದಿಂದ ಹೊರ ನಡೆದಿರುವುದು ಮೈತ್ರಿಕೂಟಕ್ಕೆ ಸವಾಲಾಗಿ ಪರಿಣಮಿಸಿದೆ.
ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಮತ್ತು ಇತರೆ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದಾರೆ. ಸಭೆ ಮುಂದುವರಿದಿದ್ದು, ತಡರಾತ್ರಿವರೆಗೂ ನಡೆಯಬಹುದು ಎಂದು ಹೇಳಲಾಗುತ್ತಿದೆ.
ಇದಕ್ಕೂ ಮೊದಲು ಇಂದು ಬೆಳಗ್ಗೆ ಜೆಡಿಯು ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಪ್ರಮುಖ ನಾಯಕರು ಸುದೀರ್ಘ ಸಭೆ ನಡೆಸಿದ್ದರು. ಬಳಿಕ, ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದರು. (ಏಜೆನ್ಸೀಸ್)