

ಶಿವಮೊಗ್ಗ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಶನಿವಾರ ಬೆಳಗ್ಗೆ ಸುರಿಯುವ ಮಳೆಯನ್ನೂ ಲೆಕ್ಕಿಸದೆ ಬೈಕ್ ರ‌್ಯಾಲಿ ನಡೆಸಿದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ರ‌್ಯಾಲಿಗೆ ಚಾಲನೆ ನೀಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಿಂದ ಆರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂತಿಮವಾಗಿ ಸೈನಿಕ ಉದ್ಯಾನದಲ್ಲಿ ಸಂಪನ್ನಗೊಂಡಿತು.
ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಸಿ.ಎಸ್.ಷಡಾಕ್ಷರಿ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಸೈನಿಕರ ಗೌರವಾರ್ಥವಾಗಿ ಪ್ರತಿವರ್ಷ ಜು.26ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರ ರಾಜಧಾನಿ ಸೇರಿ ಭಾರತದಾದ್ಯಂತ ಆಚರಿಸಲಾಗುತ್ತದೆ. ಭಾರತೀಯ ಸಶಸ್ತ್ರ ಪಡೆಗಳ ಕೊಡುಗೆಗಳನ್ನು ಸ್ಮರಿಸಲು ದೇಶಾದ್ಯಂತ ವಿಜಯೋತ್ಸವ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮ ಎಲ್ಲರಲ್ಲೂ ದೇಶಾಭಿಮಾನ ಮೂಡಿಸಲಿದೆ. ಸುರಕ್ಷತೆಗೆ ಪ್ರೇರೇಪಿಸಲಿದೆ. ಜಮ್ಮು-ಕಾಶ್ಮೀರದ ಕಾರ್ಗಿಲ್ ಅನ್ನು ಮರಳಿ ವಶಕ್ಕೆ ಪಡೆದ ಭಾರತೀಯ ಸೈನಿಕರ ಅಪ್ರತಿಮ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸುವುದರ ದ್ಯೋತಕವಾಗಿದೆ ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಡಾ. ಸಿ.ಎ.ಹಿರೇಮಠ ಸೇರಿ ಮಾಜಿ ಯೋಧರು, ಹುತಾತ್ಮ ಯೋಧರ ಕುಟುಂಬದ ಸದಸ್ಯರು, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.