

ಹನೂರು: ಬಿಜೆಪಿಗರು ಮತಗಳ್ಳತನದ ಮೂಲಕ ಕಳೆದ ಎರಡು-ಮೂರು ಚುನಾವಣೆಗಳಲ್ಲೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮಾಜಿ ಶಾಸಕ ಆರ್.ನರೇಂದ್ರ ಆರೋಪಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಆಯೋಜಿಸಿದ್ದ ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಹಾರ, ಉತ್ತರಪ್ರದೇಶ, ಬೆಂಗಳೂರು ಹಾಗೂ ವಿವಿಧ ಕ್ಷೇತ್ರದಲ್ಲಿನ ಮತದಾರರ ಮತಪಟ್ಟಿಯ ಸಮೇತ ಮತಗಳ್ಳತನವಾಗಿರುವ ಬಗ್ಗೆ ಸಮಗ್ರ ಮಾಹಿತಿ ಹಾಗೂ ದಾಖಲಾತಿಗಳನ್ನು ಹಾಜರುಪಡಿಸುವ ಮೂಲಕ ಆರೋಪ ಮಾಡಿದ್ದಾರೆ. ಬೆಂಗಳೂರಿನ ಒಂದೇ ಒಂದು ಮನೆಯಲ್ಲಿ 85 ಮತಗಳು ಇರುವ ದಾಖಲಾತಿಯನ್ನು ಬಿಡುಗಡೆ ಮಾಡಿದ್ದು,. ದಾಖಲಾತಿ ಸಮೇತ ಆರೋಪ ಮಾಡಿದ್ದಾರೆ. ಪತ್ರಕರ್ತರು ಸಹ ವಾಸ್ತವತೆಯನ್ನು ತಿಳಿಯಲು ರಿಯಾಲಿಟಿ ಚೆಕ್ ಮಾಡಿದ್ದು, ಈ ವೇಳೆಯೂ ಮತಪಟ್ಟಿಯಲ್ಲಿನ ಯಾರೊಬ್ಬರೂ ಸ್ಥಳದಲ್ಲಿ ಇರಲಿಲ್ಲ. ಆದರೆ ಮತದಾರರ ಪಟ್ಟಿಯಲ್ಲಿ ಮಾತ್ರ ಹೆಸರು ಸೇರಿಸಿ ಬಿಜೆಪಿಗೆ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಈಗಾಗಲೇ ಬಿಹಾರ ವಿಧಾನಸಭಾ ಚುನಾವಣೆಗೂ ದಿನಾಂಕ ಘೋಷಣೆಯಾಗಿದ್ದು ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಪ್ರತಿ ವಿಧಾನಸಭಾ ಕ್ಷೇತ್ರಗಳ ಪ್ರತಿ ಮನೆ ಮನೆಗೂ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬಿಹಾರ ಚುನಾವಣೆಯಲ್ಲಿಯೂ ಬಿಜೆಪಿಗರು ಯಾವ ರೀತಿ ಅಧಿಕಾರ ಹಿಡಿಯುತ್ತಿದ್ದಾರೆ. ಜತೆಗೆ ಮತಗಳ್ಳತನದ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗಾಗಿ ದೇಶದ ಜನರಿಗೆ ಬಿಜೆಪಿಯ ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮತದಾನ ಪ್ರತಿಯೊಬ್ಬರ ಹಕ್ಕು, ನಮ್ಮ ಹಕ್ಕನ್ನು ಬೇರೆಯವರು ಕಳ್ಳತನ ಮಾಡದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಮುಂದಿನ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಪ್ರತಿಯೊಬ್ಬರೂ ಬೂತ್‌ಗಳಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲನೆ ಮಾಡಿಕೊಳ್ಳುವ ಮೂಲಕ ಯಾವುದೇ ಮತಗಳ್ಳತನ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದರು.
ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈಶ್ವರ್, ಮುಕುಂದ ವರ್ಮ, ಮಹಿಳಾ ಘಟಕದ ಅಧ್ಯಕ್ಷೆ ಲತಾಮಣಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ತಾಲೂಕು ಸಮಿತಿ ಅಧ್ಯಕ್ಷ ಪಾಳ್ಯ ರಾಚಯ್ಯ ಹಾಗೂ ಇನ್ನಿತರರು ಹಾಜರಿದ್ದರು.