

ನಂಜನಗೂಡು: ನಂಜನಗೂಡು ನಗರ ವ್ಯಾಪ್ತಿಯಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬೆಂಬಲಿಸಿ ನಗರಸಭೆ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಲಿದ್ದಾರೆ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ವಿಶ್ವಾಸ ವ್ಯಕ್ತಪಡಿಸಿದರು.
ಶುಕ್ರವಾರ ನಗರಸಭೆ 20ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಪಿ.ಮಹೇಶ್ ಅತ್ತಿಖಾನೆ ಅವರೊಂದಿಗೆ ನಗರದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿಕೆ ಬಳಿಕ ಮಾತನಾಡಿದ ಅವರು, ಕಳೆದ ಬಾರಿ ವಾರ್ಡ್‌ನ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದರು. ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಕೀಲ ಮಹೇಶ್ ಅತ್ತಿಖಾನೆ ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದು ಉತ್ತಮ ಅಭ್ಯರ್ಥಿ ಎಂಬ ಹಿರಿಮೆಯನ್ನು ಗಳಿಸಿದ್ದಾರೆ. ಅಭಿವೃದ್ಧಿಯನ್ನೇ ಮಾನದಂಡವಾಗಿಸಿಕೊಂಡು ಮತದಾರರ ಮನವೊಲಿಸಲಾಗುವುದು. ಉಪಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಅಭ್ಯರ್ಥಿ ಪರ ಕೆಲಸ ಮಾಡಲಿದ್ದು ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಶವ್ಯಕ್ತಪಡಿಸಿದರು.
ಬಿಜೆಪಿ ಅಭ್ಯರ್ಥಿ ಪಿ.ಮಹೇಶ್ ಅತ್ತಿಖಾನೆ ಮಾತನಾಡಿ, ಹಲವು ವರ್ಷಗಳಿಂದ ಬಿಜೆಪಿಯಲ್ಲಿ ತಳ ಮಟ್ಟದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಮತದಾರರ ಸೇವೆ ಮಾಡುವ ಉದ್ದೇಶದೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮತದಾರರು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಬಿಜೆಪಿ ಮಂಡಲ ಅಧ್ಯಕ್ಷ ಪಿ.ಮಹೇಶ್, ನಗರಾಧ್ಯಕ್ಷ ಶ್ರೀನಿವಾಸರೆಡ್ಡಿ, ವಿನಯ್ ಕುಮಾರ್, ಕೆ.ಜಿ.ಆನಂದ್, ಪ್ರೇಮಾ ಶಂಭಯ್ಯ, ಬಾಲಚಂದ್ರು, ಸಂಜಯ್ ಶರ್ಮಾ, ಎನ್.ಸಿ.ಬಸವಣ್ಣ, ಮಹೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಚಿಕ್ಕರಂಗನಾಯಕ ಇದ್ದರು.