ಮೇಲ್ಮನೆ ಚುನಾವಣೆ ಪ್ರಚಾರ; ಬಿಜೆಪಿ ಅಭ್ಯರ್ಥಿಗಳಿಂದ ಕುಮಾರಸ್ವಾಮಿಗೆ ಮಣೆ

HD Kumaraswamy
Published on

ಬೆಂಗಳೂರು: ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯುವ ಚುನಾವಣೆ ಪ್ರಚಾರಕ್ಕೆ ಆಗಮಿಸುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೇಡಿಕೆ ಹೆಚ್ಚುತ್ತಿದೆ.

ಲೋಕಸಭೆ ಚುನಾವಣೆಯಂತೆ ಈ ಚುನಾವಣೆಯಲ್ಲೂ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರುತರ ಜವಾಬ್ದಾರಿಯೂ ಕುಮಾರಸ್ವಾಮಿ ಹೆಗಲ ಮೇಲಿದೆ.

ಆರು ಸ್ಥಾನಗಳಲ್ಲಿ ಜೆಡಿಎಸ್‌ಗೆ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಬಿಟ್ಟುಕೊಡಲಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಕುಮಾರಸ್ವಾಮಿ ಸಮ್ಮಿತಿ ಸೂಚಿಸಿದ್ದಾರೆ. ಈಗಾಗಲೇ ವೈ.ಎ.ನಾರಾಯಣಸ್ವಾಮಿ ಪರ ಕೋಲಾರ, ಚಿಕ್ಕಬಳ್ಳಾಪುರಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಸಮನ್ವಯ ಸಮಿತಿ ಸಭೆ ಬಳಿಕ ಉಭಯ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಂತೂ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ತಿರುಗಾಡುತ್ತಿದ್ದಾರೆ.

ಮೈತ್ರಿ ಪಕ್ಷಗಳಲ್ಲಿ ಸಮನ್ವಯ

ಈಗ ಕುಮಾರಸ್ವಾಮಿ ಕೂಡ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದ ಅಖಾಡಕ್ಕೆ ಧುಮುಕಲಿದ್ದಾರೆ. ಎರಡೂ ಪಕ್ಷಗಳ ಉದ್ದೇಶವೂ ಕಾಂಗ್ರೆಸ್ ಮಣಿಸುವುದೇ ಆಗಿರುವುದರಿಂದ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರಿಗೆ ಸಮನ್ವಯದಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವಂತೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ.

ಬಿಜೆಪಿ ಪರ ಪ್ರಚಾರಕ್ಕೆ ವೇಳಾಪಟ್ಟಿ

ಬಿಜೆಪಿ ಅಭ್ಯರ್ಥಿಗಳ ಪರ ಎಲ್ಲೆಲ್ಲಿ ಕುಮಾರಸ್ವಾಮಿ ಪ್ರಚಾರ ಕೈಗೊಳ್ಳಬೇಕು ಮತ್ತು ಎಲ್ಲೆಲ್ಲಿ ಉಭಯ ಪಕ್ಷಗಳ ನಾಯಕರು ಭಾಗವಹಿಸಬೇಕು ಎಂಬ ಬಗ್ಗೆ ವೇಳಾಪಟ್ಟಿ ಸಿದ್ಧಗೊಳ್ಳುತ್ತಿದೆ. ಅದಾದ ಬಳಿಕ ಉಳಿದ ಕೆಲವೇ ದಿನಗಳನ್ನು ಸಮರ್ಥವಾಗಿ ಬಳಸಿಕೊಂಡು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ ನಡುವೆಯೂ ಕುಮಾರಸ್ವಾಮಿ ಮೇಲ್ಮನೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ತಮ್ಮ ನಿವಾಸದಲ್ಲೇ ಕುಳಿತು ಚುನಾವಣಾ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಎಲ್ಲ ಕ್ಷೇತ್ರಗಳ ಪಕ್ಷದ ನಾಯಕರನ್ನು ಸಂಪರ್ಕಿಸಿ ಚುನಾವಣಾ ಪ್ರಚಾರ ಕಹಳೆ ಮೊಳಗಿಸುವಂತೆ ತಾಕೀತು ಮಾಡಿದ್ದಾರೆ. ಹಾಗಾಗಿ ಎಲ್ಲ ಆರೂ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ಜೋರಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net