

ಶಿವಮೊಗ್ಗ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೇ 3ರಂದು ಶಿವಮೊಗ್ಗದಲ್ಲಿ ಮುಸ್ಲಿಂ ಸಂಘಟನೆಗಳು ನಡೆಸಿದ ಪ್ರತಿಭಟನೆ ಕಾನೂನು ಬಾಹಿರ. ಆ ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಪ್ರಮುಖರು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ಗೆ ಮನವಿ ಸಲ್ಲಿಸಿದರು.
ಸರ್ಕಾರದ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಬಾರದು ಎಂದು ಹೈಕೋರ್ಟ್ ಈಗಾಗಲೇ ಆದೇಶಿಸಿದೆ. ಅದನ್ನು ಉಲ್ಲಂಘಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ರಸ್ತೆಗಳನ್ನು ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಲಾಗಿದೆ ಎಂದು ದೂರಿದರು.
ಮೇ 3ರಂದು ಡಿಸಿ ಕಚೇರಿ ಎದುರು ಭಾಗದಲ್ಲಿ ನಡೆದ ಪ್ರತಿಭಟನೆ ವೇಳೆ ಮಹಾವೀರ ವೃತ್ತ ಮತ್ತು ಅದಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಿ, ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೂ ಸಂಚಾರ ನಿರ್ಬಂಧಿಸಲಾಗಿತ್ತು. ಇದು ನ್ಯಾಯಾಲಯದ ಆದೇಶ ಉಲ್ಲಂಘನೆ ಎಂದು ಆರೋಪಿಸಿದರು.
ಪ್ರತಿಭಟನಾಕಾರರಿಗೆ ರಕ್ಷಣೆ ನೀಡಿದವರು, ಅವರಿಗೆ ಅವಕಾಶ ನೀಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಪ್ರತಿಭಟನೆಯಲ್ಲಿ ಭಾಗವಹಿಸಿದ ಎಸ್‌ವೈಒ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯಾರ್, ಮೌಲ್ವಿ ಮುಫ್ತಿ ಅಖಿಲ್ ರಝಾ, ಎಬಿಸಿಆರ್ ಅಧ್ಯಕ್ಷ ಸುಧೀರ್‌ಕುಮಾರ್ ಮುರೊಳ್ಳಿ, ಶಾಸಕಿ ಬಲ್ಕಿಷ್ ಬಾನು, ಮೊಹಮ್ಮದ್ ಇರ್ಫಾನ್ ಖಾನ್, ಇಜಾಜ್ ಪಾಶಾ ಮತ್ತಿತರರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ.ಹರಿಕೃಷ್ಣ, ಪ್ರಮುಖರಾದ ದೀನದಯಾಳ್, ಮಂಜುನಾಥ್ ನವುಲೆ ಇತರರಿದ್ದರು.