ಬಿಜೆಪಿ ಆಡಳಿತ ವೈಫಲ್ಯ ಕಾಂಗ್ರೆಸ್‌ಗೆ ವರದಾನ

b r jayanth
ಬಿ.ಆರ್.ಜಯಂತ್
Published on

ಸಾಗರ: ಸಾಗರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಲಸೆ ಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮಾರ್ಗದರ್ಶನದಲ್ಲಿ ನೂತನ ಅಧ್ಯಕ್ಷರು ಪಕ್ಷ ಸಂಘಟನೆ ಜತೆಗೆ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ತಮ್ಮದೆ ಕಾರ್ಯತಂತ್ರ ರೂಪಿಸಲಿದ್ದಾರೆ. ನಾವು ಸಹ ಸಂಘಟಿತವಾಗಿ ಪಕ್ಷದ ಗೆಲುವಿಗೆ ತೊಡಗಿಕೊಳ್ಳುತ್ತೇವೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ.ಆರ್.ಜಯಂತ್ ಹೇಳಿದರು.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಗೀತಾ ಶಿವರಾಜ್‌ಕುಮಾರ್ ಕಣಕ್ಕಿಸಳಿದಿದ್ದಾರೆ. ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ನೀಡಿರುವುದರಿಂದ ಎಲ್ಲ ವರ್ಗದ ಜನರು ಬೆಂಬಲಿಸುವ ನಿರೀಕ್ಷೆ ಇದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚು ಉತ್ಸಾಹದಿಂದ ಗೀತಾ ಶಿವರಾಜ್‌ಕುಮಾರ್ ಅವರನ್ನು ಗೆಲ್ಲಿಸಲು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೇಶದಲ್ಲಿ ಬಿಜೆಪಿ ಆಡಳಿತ ವೈಫಲ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವರದಾನವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ದಾಖಲಿಸಲಿದೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವ ಕಾಲಸನ್ನಿಹಿತವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ಗೆ ಹೆಚ್ಚು ಮತ ಬೀಳುವ ವಿಶ್ವಾಸವಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಕಲಸೆ ಚಂದ್ರಪ್ಪ ಮಾತನಾಡಿ, ಪಕ್ಷದ ಹಿರಿಯ ನಾಯಕರು, ಪ್ರಮುಖರ ಮಾರ್ಗದರ್ಶನದಲ್ಲಿ ಪಕ್ಷವನ್ನು ತಾಲೂಕಿನಲ್ಲಿ ಸದೃಢಗೊಳಿಸಲಾಗುವುದು. ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್‌ಕುಮಾರ್‌ಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಐ.ಎನ್.ಸುರೇಶಬಾಬು, ಎಚ್.ಎಂ.ರವಿಕುಮಾರ್, ಕೆ.ಹೊಳೆಯಪ್ಪ, ಗಣಪತಿ ಮಂಡಗಳಲೆ, ಮಹಾಬಲ ಕೌತಿ, ಮಹ್ಮದ್ ಖಾಸಿಂ, ಚೇತನರಾಜ್ ಕಣ್ಣೂರು, ಹಮೀದ್, ಕನ್ನಪ್ಪ, ವೈ.ಕೆ.ರವಿಕುಮಾರ್, ವೆಂಕಟೇಶ್, ವಿ.ಶಂಕರ್, ಉಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net