

ಬೆಂಗಳೂರು: ಹಗರಣಗಳ ಕಾಂಗ್ರೆಸ್ ಸರ್ಕಾರ, ದಲಿತರ ಹಣ ಲೂಟಿ ಮಾಡಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತು. ಆ ಮೂಲಕ ವಿಧಾನ ಮಂಡಲದ ಮುಂಗಾರು ಅಧಿವೇಶನದಲ್ಲಿ ಚರ್ಚೆಯ ಸ್ವರೂಪ ಹೇಗಿರಲಿದೆ ಎಂದು ಮೊದಲ ದಿನವಾದ ಸೋಮವಾರವೇ ಅನಾವರಣ ಮಾಡಿತು.
ಶಾಸಕರ ಭವನದ ಆವರಣದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಬಿಜೆಪಿ ನಾಯಕರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಘೋಷಣಾ ಫಲಕಗಳನ್ನು ಪ್ರದರ್ಶಿಸಿ, ಧಿಕ್ಕಾರ ಮೊಳಗಿಸಿ ಪ್ರತಿಭಟನೆ ನಡೆಸಿದರು. ನಂತರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸುತ್ತಾ ವಿಧಾನಸೌಧ ತಲುಪಿದರು. ಇದೇ ಸಂದರ್ಭದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದೆ. ಶಾಸನ ಬದ್ಧ ಅನುದಾನವನ್ನೂ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಕಾಂಗ್ರೆಸ್ ಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ. ಅಧಿವೇಶನದಲ್ಲಿ ಮೊದಲಿಗೆ ವಾಲ್ಮೀಕಿ ನಿಗಮದ 187 ಕೋಟಿ ರೂ.ಗಳ ಹಗರಣ ಪ್ರಸ್ತಾಪಿಸುತ್ತೇವೆ. ನಂತರ ಮುಡಾ ನಿವೇಶನ ಹಂಚಿಕೆ ಅಕ್ರಮ ಕೈಗೆತ್ತಿಕೊಳ್ಳುತ್ತೇವೆ. ಅಧಿವೇಶನವನ್ನು ಇನ್ನೂ 10 ದಿನಗಳ ಕಾಲ ವಿಸ್ತರಿಸಲು ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ಆರ್.ಅಶೋಕ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಾಗ್ಗೆ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳುತ್ತಿರುತ್ತಾರೆ. ಈಗ ಉಪ್ಪು ತಿಂದಿದ್ದಾರೆ ನೀರು ಕುಡಿಸುತ್ತೇವೆ ಎಂದು ಮಾರ್ಮಿಕವಾಗಿ ಹೇಳಿದರು.
ಆಡಳಿತ ಪಕ್ಷ ಹಲವಾರು ತಪ್ಪುಗಳನ್ನು ಮಾಡಿ ಅನಾಯಾಸವಾಗಿ ಅನೇಕ ವಿಷಯವಸ್ತುಗಳನ್ನು ಪ್ರತಿಪಕ್ಷಗಳಿಗೆ ಕೊಟ್ಟಿದೆ. ಸಂವಿಧಾನದ ಪ್ರತಿ ಹಿಡಿದು ಓಡಾಡುವುದರಿಂದ ಹಕ್ಕು ರಕ್ಷಣೆಯಾಗದು. ಭ್ರಷ್ಟಾಚಾರ ಮುಚ್ಚಿಕೊಳ್ಳಲು ಜಾತಿ ಹೆಸರು ಮುನ್ನೆಲೆಗೆ ತಂದಿದ್ದಾರೆ. ಜಾತಿ ಹೆಸರಿನಲ್ಲಿ ಭ್ರಷ್ಟಾಚಾರ ರಕ್ಷಣೆಗೆ ನಮ್ಮ ಕಾನೂನು, ಸಂವಿಧಾನ ವ್ಯವಸ್ಥೆಯಲ್ಲಿ ಅವಕಾಶವಿಲ್ಲ ಎಂದು ಸಿ.ಟಿ.ರವಿ ತಿವಿದರು.