

ನವದೆಹಲಿ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುಲಿರುವ ಛತ್ತೀಸ್ಗಢ ಹಾಗೂ ಮಧ್ಯಪ್ರದೇಶಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಛತ್ತೀಸ್ಗಢಕ್ಕೆ 21 ಹಾಗೂ ಮಧ್ಯಪ್ರದೇಶದಲ್ಲಿ 39 ಹುರಿಯಾಳುಗಳನ್ನು ಪಕ್ಷದಿಂದ ಕಣಕ್ಕಿಳಿಸಲಾಗಿದೆ.
ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಪ್ರತಿ ರಾಜ್ಯದಲ್ಲಿ ಐವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದ್ದು, ಇನ್ನಷ್ಟು ಅಭ್ಯರ್ಥಿಗಳ ಪಟ್ಟಿಯನ್ನು ಚುನಾವಣೆ ಘೋಷಣೆಯಾಗುವ ಮುನ್ನವೇ ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ನಡೆದ ಕೇಂದ್ರ ಚುನಾವಣಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಹೆಸರುಗಳನ್ನು ಅಂತಿಮ ಮಾಡಲಾಗಿದೆ. ಸಭೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿದ್ದರು.
ವರ್ಷಾಂತ್ಯದಲ್ಲಿ ನಡೆಯುವ ಪಂಚರಾಜ್ಯ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುವ ಬಿಜೆಪಿ ನಾಯಕರು ಮುಂಬರುವ ಲೋಕಸಭೆ ಎಲೆಕ್ಷನ್ಗೆ ಪೂರ್ವಭಾವಿ ಸಿದ್ದತೆ ನಡೆಸುತ್ತಿದ್ದಾರೆ. ಪಂಚರಾಜ್ಯ ಚುನಾವಣೆಗಳ ಫಲಿತಾಂಶವು ಮುಂಬರುವ ಲೋಕಸಭೆ ಎಲೆಕ್ಷನ್ ಮೇಲೆ ಪರಿಣಾಮ ಬೀರಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಈಗಿನಿಂದಲ್ಲೇ ಕಾರ್ಯಪ್ರವೃತ್ತರಾಗಿದ್ದಾರೆ.
ಛತ್ತೀಸ್ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂಗೆ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಐದು ರಾಜ್ಯಗಳ ಪೈಕಿ ಬಿಜೆಪಿ ಮಧ್ಯಪ್ರದೇಶದಲ್ಲಿ ಮಾತ್ರ ಅಧಿಕಾರದಲ್ಲಿದ್ದು, ಉಳಿದ ಕಡೆ ತನ್ನ ನೆಲೆಯನ್ನು ವಿಸ್ತರಿಸಲು ಭರದಿಂದ ಪ್ರಚಾರ ನಡೆಸುತ್ತಿದೆ.