

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಹಾಗೂ ರೈತ ವಿರೋಧಿ ನಡೆಯನ್ನು ಖಂಡಿಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಾರಥ್ಯದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೇಸರಿ ಪಡೆ ಬೃಹತ್ ಹೋರಾಟ ನಡೆಸುತ್ತಿದೆ.
ನೂರು ದಿನಗಳನ್ನು ಸಂಭ್ರಮಿಸುತ್ತಿರುವ ಸರ್ಕಾರ ಬರಗಾಲವನ್ನು ಮರೆತಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರಾಜ್ಯಕ್ಕೆ ದ್ರೋಹ ಬಗೆದಿದೆ. ರೈತರ ಸಂಕಷ್ಟ, ಕುಡಿಯುವ ನೀರಿನ ಬವಣೆ ನಿರ್ಲಕ್ಷಿಸಿ, ಗ್ಯಾರಂಟಿಗಳ ಜಾತ್ರೆ, ದುಂದು ವೆಚ್ಚ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತವಾಗಿದೆ. ಬ್ರ್ಯಾಂಡ್ ಹೆಸರಿನಲ್ಲಿ ಬರೀ ಸುತ್ತಾಟ ಮಾಡುತ್ತಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಮಂಜೂರಾದ ಕಾಮಗಾರಿಗಳು ನಡೆಯುತ್ತಿವೆ. ಆದರೆ, ಹೊಸ ಕಾಮಗಾರಿ ನಡೆಯುತ್ತಿಲ್ಲ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಮುಖಂಡರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದ ಗೌಡ, ಮಾಜಿ ಸಚಿವರಾದ ಆರ್.ಅಶೋಕ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಮುನಿರತ್ನ, ಗೋವಿಂದ ಕಾರಜೋಳ, ಬೈರತಿ ಬಸವರಾಜ, ಸಂಸದ, ಶಾಸಕರು, ಮುಖಂಡರು, ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.