

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಉರುಳಾಗಿ ಪರಿಣಮಿಸಿರುವ ಮುಡಾ ಹಾಗೂ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ಆಡಳಿತ ಪಕ್ಷದ ವಿರುದ್ಧ ತನ್ನ ವಾಗ್ದಾಳಿಯನ್ನು ಮುಂದುವರೆಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಒಲಂಪಿಕ್ಸ್ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ, ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ ಖಚಿತ-ನಿಶ್ಚಿತ-ಖಂಡಿತ. ನೆರೆಯಿಂದ ಹಾನಿಗೊಳಗಾದ ಕನ್ನಡಿಗರ ಕಂಬನಿ ಒರೆಸುವದಕ್ಕಿಂತಲೂ, ಹೈಕಮಾಂಡ್ ಗೆ ಕಪ್ಪ ತಲುಪಿಸುವ ಕಾರ್ಯದಲ್ಲಿ ಮಗ್ನವಾಗಿರುವ ಸಿಎಂ-ಡಿಸಿಎಂ ಎಂದು ಕಿಡಿಕಾರಿದೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ. ಇದಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪಗಳು ಕುರಿತು ಚರ್ಚಿಸಲು ಸಿಎಂ ಹಾಗೂ ಡಿಸಿಎಂರನ್ನು ಹೈಕಮಾಂಡ್ ಕರೆಸಿಕೊಂಡಿದೆ ಎಂದು ಹೇಳಲಾಗುತ್ತಿದೆ.