ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ವಿರುದ್ಧ ದೂರು ದಾಖಲು!

ವಿಜಯವಾಣಿ - 2024-01-04T123634.707
Published on

ಮಂಡ್ಯ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭಗೊಂಡಿದ್ದು, ಈ ಮಧ್ಯೆ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ನೀಡಿದ ವಿವಾದಾತ್ಮಕ ಹೇಳಿಕೆಯೊಂದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಖಂಡಿಸಿದ ಮಂಡ್ಯ ಬಿಜೆಪಿ ಕಾರ್ಯಕರ್ತರು, ಇದೀಗ ಕಾಂಗ್ರೆಸ್ ನಾಯಕ ಬಿ.ಹರಿಪ್ರಸಾದ್ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಅಹಿತಕರ ಘಟನೆ ಕರ್ನಾಟಕದಲ್ಲಿ ಆಗಬಹುದು ಎಂದು ಹರಿಪ್ರಸಾದ್‌ ಹೇಳಿಕೆ ನೀಡಿದ್ದರು. ಸದ್ಯ ಈ ಹೇಳಿಕೆಗೆ ರಾಜ್ಯವ್ಯಾಪಿ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.

ರಾಜ್ಯ ಮತ್ತು ದೇಶದಲ್ಲಿ ಗೋಧ್ರಾ, ಪುಲ್ವಾಮಾ ಮಾದರಿಯ ದಾಳಿ ಮರುಕಳಿಸಬಹುದೆಂಬ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ಜಿಲ್ಲಾ ಎಸ್ಪಿ ಎನ್.ಯತೀಶ್‌ಗೆ ದೂರು ನೀಡಲಾಗಿದೆ. ಜ.22ರಂದು ಶ್ರೀರಾಮಮಂದಿರ ಉದ್ಘಾಟನೆಗೆ ಇಡಿ ದೇಶವೇ ಕಾಯುತ್ತಿದೆ.‌ ಇಂತಹ ಸಂದರ್ಭದಲ್ಲಿ ಹರಿಪ್ರಸಾದ್ ಕೊಟ್ಟ ಹೇಳಿಕೆ ಆಘಾತಕಾರಿ ಎಂದು ಹೇಳಿದ್ದಾರೆ.

ದೇಶದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಈ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ, ಹರಿಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ದೂರಿನಲ್ಲಿ ಮನವಿ ಮಾಡಿದ ಬಿಜೆಪಿ ಕಾರ್ಯಕರ್ತರು, ಮಂಪರು ಪರೀಕ್ಷೆಗೆ ಒಳಪಡಿಸುವಂತೆಯೂ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net