

ಮೈಸೂರು: ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯುಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ 82ನೇ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಡಿ ಚಾರ್ಜ್‌ಶೀಟ್ ಹಾಕಲಾಗಿದೆ. ಸದ್ಯ ಕೋರ್ಟ್ ದಯೆಯಿಂದ ಹೊರಗೆ ಇದ್ದಾರೆ. ಈ ಹಿಂದೆ ಜೈಲಿಗೂ ಹೋಗಿ ಬಂದಿದ್ದಾರೆ. ನನ್ನ ರಾಜೀನಾಮೆ ಕೇಳಲು ಅವರಿಗೆ ನೈತಿಕತೆ ಇಲ್ಲ. ಮೊದಲು ಬಿಎಸ್‌ವೈ ಸಾರ್ವಜನಿಕ ಜೀವನದಿಂದ ನಿವೃತ್ತರಾಗಲಿ ಎಂದ ಅವರು, ಇಂತಹ ವಿಷಯವನ್ನು ಮಾಧ್ಯಮಗಳು ಪ್ರಸಾರ ಮಾಡಲ್ಲ ಏಕೆ? ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.