ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಚೌಡಯ್ಯದಾನಪುರ ಗ್ರಾಮಸ್ಥರ ಪ್ರತಿಭಟನೆ

19-RNR-03
Published on

ರಾಣೆಬೆನ್ನೂರ: ಕಳೆದ ನಾಲ್ಕೈದು ದಿನಗಳಿಂದ ಸಮಪರ್ಕವಾಗಿ ಬಸ್ ಬರುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ಚೌಡಯ್ಯದಾನಪುರ ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶನಿವಾರ ಗ್ರಾಮದಲ್ಲಿ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಚೌಡಯ್ಯದಾನಪುರ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಓಡಾಡಲು ಹಾವೇರಿ ಸಾರಿಗೆ ಸಂಸ್ಥೆ ಅಧಿಕಾರಿಗಳು ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಿದ್ದಾರೆ. ಆದರೆ, ಬಸ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ಗ್ರಾಮದ ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜ್‌ಗೆ ತೆರಳು ಆಗುತ್ತಿಲ್ಲ.
ಗುತ್ತಲ ಮಾರ್ಗದ ಬಸ್‌ಗಳು ಸರಿಯಾಗಿ ಗ್ರಾಮಕ್ಕೆ ಬರುತ್ತಿಲ್ಲ. ಹೀಗಾಗಿ ಗ್ರಾಮಸ್ಥರು ಓಡಾಡಲು ತೀವ್ರ ತೊಂದರೆ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸರಿಯಾದ ಸಮಯಕ್ಕೆ ಬಸ್ ಬಿಡುವ ವ್ಯವಸ್ಥೆ ಮಾಡಬೇಕು. ಈ ಕುರಿತು ಅಧಿಕಾರಿಗಳು ಸ್ಥಳಕ್ಕೆ ಬಂದು ಭರವಸೆ ಕೊಡಬೇಕು. ಅಲ್ಲಿಯವರೆಗೆ ಬಸ್ ಬಿಡುವುದಿಲ್ಲ ಎಂದು ಪಟ್ಟುಹಿಡಿದರು.
ಸಾರಿಗೆ ಘಟಕದ ವ್ಯವಸ್ಥಾಪಕ ಪ್ರಶಾಂತ ದೂರವಾಣಿ ಮೂಲಕ ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಇನ್ಮುಂದೆ ಬಸ್‌ಗಳ ಸಮಯದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net