

ಹನೂರು : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿನ ಕಾಂಗ್ರೆಸ್‌ನ ಗೆಲುವು ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.
ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆಯಕ್ಕು ಶನಿವಾರ ಪಟ್ಟಣದ ಕಾಂಗ್ರೆಸ್ ಕಚೇರಿ ಮುಂಭಾಗ ಕಾರ್ಯಕರ್ತರ ಜತೆಗೂಡಿ ಪಟಾಕಿ ಸಿಡಿಸಿ ಸಂಭ್ರಮಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಮೂಲಕ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಜತೆಗೆ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಹಾಗೆಯೇ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುವುದರ ಮೂಲಕ ಜನರಿಗೆ ಅನುಕೂಲ ಕಲ್ಪಿಸಿದ್ದಾರೆ. ಹಾಗಾಗಿ ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಾರ ವಿಶ್ವಾಸ ಹಾಗೂ ಒಲವನ್ನು ಹೊಂದಿದ್ದು, 3 ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಮತದ ಅಂತರದಿಂದ ಜಯಗಳಿಸಿರುವುದೇ ಸಾಕ್ಷಿ. ಇದು ಮುಂಬರುವ ಚುನಾವಣೆಗಳಲ್ಲೂ ಮರುಕಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ರಾಜ್ಯದಲ್ಲಿಯೇ ಎಲ್ಲರ ಗಮನ ಸೆಳೆದಿದ್ದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯೋಗೇಶ್ವರ್ ಪರ ನಾನು ಮತಯಾಚನೆಯಲ್ಲಿ ತೊಡಗಿದ್ದ ವೇಳೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಆದರೆ ನಮ್ಮ ಅಭ್ಯರ್ಥಿಯನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಅಪಪ್ರಚಾರ ಮಾಡಿದ್ದರು. ಆದರೆ ಇದನ್ನು ಲೆಕ್ಕಿಸದ ಜನತೆ ಯೋಗೇಶ್ವರ್ ಅವರನ್ನು ಹೆಚ್ಚಿನ ಮತದ ಅಂತರದಿಂದ ಗೆಲ್ಲಿಸುವುದರ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದು ತಿಳಿಸಿದರು.
ಪಪಂ ಸದಸ್ಯರಾದ ಗಿರೀಶ್, ಸುದೇಶ್, ಹರೀಶ್, ಸಂಪತ್‌ಕುಮಾರ್, ಬಸವರಾಜು, ನವೀನ್, ರಾಮಾಪುರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಈಶ್ವರ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಟರಾಜು, ಮುಖಂಡರಾದ ಮಾದೇಶ್, ರಾಜು, ನಾಗರಾಜು ಹಾಗೂ ಇನ್ನಿತರರು ಇದ್ದರು.