

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ನಾಯಕರು ಜಂಟಿಯಾಗಿ ನಡೆಸಿದ ಪಾದಯಾತ್ರೆ ಯಶಸ್ವಿಯಾಗಿ ಸಂಪನ್ನಗೊಂಡಿದ್ದು, ಇದೀಗ ವಾಲ್ಮೀಕಿ ನಿಗಮದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ದೋಸ್ತಿ ಪಾಳಯ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜನೆ ರೂಪಿಸುತ್ತಿದ್ದು, ಇದರ ನಡುವೆಯೇ ಬಿಜೆಪಿ ಶಾಸಕ ಬಸನ್ಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ.
ಈಗಾಗಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಹಾಗೂ ಅವರ ಮಗನಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಂಡೆದಿರುವ ಯತ್ನಾಳ್ ರೆಬೆಲ್ ನಾಯಕರನ್ನೆಲ್ಲಾ ಒಟ್ಟುಗೂಡಿಸಿ ಸಭೆ ನಡೆಸುತ್ತಿದ್ದಾರೆ. ಬೆಳಗಾವಿ ಬಳಿ ಇರುವ ರೆಸಾರ್ಟ್ನಲ್ಲಿ ಈಚೆಗೆ ನಡೆದ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆ ನಡೆಸಲು ರೆಬೆಲ್ ನಾಯಕರು ಚಿಂತನೆ ನಡೆಸಿದ್ದು, ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ವಿಜಯೇಂದ್ರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ಕೆಲವು ಶಾಸಕರು ಉತ್ತರ ಕರ್ನಾಟಕದ ಭಾಗದಲ್ಲಿ ಪಾದಯಾತ್ರೆ ನಡೆಸುವ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ, ಅವರು ವರಿಷ್ಠರ ಅನುಮತಿ ಪಡೆದುಕೊಂಡು ಮಾಡಲಿ.
ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದೇನೆ. ಉತ್ತರಕರ್ನಾಟಕದಲ್ಲಿ ಪಾದಯಾತ್ರೆ ಮಾಡುವುದಕ್ಕೆ ಕೆಲವು ಶಾಸಕರು ನಿರ್ಧಾರ ಮಾಡಿಕೊಂಡಿದ್ದಾರೆ. ಇದಕ್ಕೆ ನನ್ನ ಅಭ್ಯಂತರವಿಲ್ಲ. ಅವರ ಪಾದಯಾತ್ರೆ ಪಕ್ಷದ ಸಂಘಟನೆಗೆ ಪೂರಕವಾಗಿರಬೇಕು. ಅದಕ್ಕಿಂತ ಮುಖ್ಯವಾಗಿ ವರಿಷ್ಠರ ಅನುಮತಿ ಪಡೆದುಕೊಳ್ಳಬೇಕು ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.