Muda Scam| 'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ: ವಿಜಯೇಂದ್ರ ಟೀಕೆ

Siddu Vijayendra
Published on

ಬೆಂಗಳೂರು: ಮುಡಾ (Muda) ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (CM Siddaramaiah) ದೊಡ್ಡ ಉರುಳಾಗಿ ಪರಿಣಮಿಸಿದ್ದು, ದಿನ ಕಳೆದಂತೆ ಸಿಎಂ ಹಾಗೂ ಕುಟುಂಬಸ್ಥರ ವಿರುದ್ಧ ಒಂದಿಲ್ಲೊಂದು ಆರೋಪ ಕೇಳಿ ಬರುತ್ತಿದೆ. ಇದೀಗ ಪರಿಹಾರ ರೂಪದಲ್ಲಿ ಪಡೆದಿರುವ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಟ್ವೀಟ್​ ಮಾಡಿ ವಾಗ್ದಾಳಿ ನಡೆಸಿದ್ದಾರೆ.

'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ. “ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ" ಎಂದು ಅಂದು ಆರ್ಭಟಿಸಿದ್ದ ಮಾನ್ಯ ಸಿದ್ದರಾಮಯ್ಯನವರು ಇಂದು ಬೇಷರತ್ತಾಗಿ ಅವರ ಪತ್ನಿಯವರಿಂದ ನಿವೇಶನ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ.

ಬಿಜೆಪಿ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದರು, ನಿಮಗೆ ದೊರೆತ 14 ಅಕ್ರಮ ನಿವೇಶನಗಳು 5000 ಸಾವಿರಕ್ಕೂ ಹೆಚ್ಚು ನಿವೇಶನಗಳ ಲೂಟಿಕೋರತನಕ್ಕೆ ರಕ್ಷಣೆಯಾಗಿ ನಿಂತಿದೆ ಎಂದು ಆರೋಪಿಸಿ ನಾವು ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಗೆ ಪರ್ಯಾಯ ಸಮಾವೇಶ ಆಯೋಜಿಸಿ ಭಂಡತನದ ಸಮರ್ಥನೆಗಿಳಿದರು, ಸಾಮಾಜಿಕ ಕಾರ್ಯಕರ್ತರ ನ್ಯಾಯಾಲಯದ ಹೋರಾಟಕ್ಕೆ ಅಸ್ತು ಎಂದ ಘನತೆವೆತ್ತ ರಾಜ್ಯಪಾಲರನ್ನು ಅವಹೇಳನ ಮಾಡಿದರು, ಅವರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಹೋರಾಟ ಮಾಡಿದರು, ನ್ಯಾಯಾಲಯದಲ್ಲಿ ಜಯ ದೊರಕದ ಹಿನ್ನಲೆಯಲ್ಲಿ ಕಾನೂನಿನ ಕುಣಿಕೆ ಬಿಗಿತ ಹೆಚ್ಚಾದಂತೆ, CBI-ED ತನಿಖೆಗಳ ನಿರೀಕ್ಷೆಯಿಂದ ಮುಖ್ಯಮಂತ್ರಿಗಳು ಬೆದರಿದ್ದಾರೆ.

ಏಕಾಏಕಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿರುವುದು ಅವರು ಕಾನೂನು ಹೋರಾಟಕ್ಕೆ ಮುನ್ನವೇ ಶಸ್ತ್ರ ತ್ಯಜಿಸಿ ಶರಣಾಗತಿ ಪ್ರಕಟಿಸಿದಂತಾಗಿದೆ. ಅಂದ ಮಾತ್ರಕ್ಕೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬಹುದು ಎಂದು ಅಂದುಕೊಂಡಿದ್ದರೆ ಅದು ಅವರ ಅಜ್ಞಾನವನ್ನು ಪ್ರತಿಬಿಂಬಿಸುತ್ತದೆ, ನೀವೇಶನಗಳನ್ನು ಹಿಂದಿರುಗಿಸಿ ತಪ್ಪೊಪ್ಪಿಕೊಂಡಂತೆ ಮುಖ್ಯಮಂತ್ರಿ ಸ್ಥಾನಕ್ಕೂ ರಾಜಿನಾಮೆ ನೀಡಿದರೆ ಮರೆತು ಹೋಗಿರುವ ತಮ್ಮ ನೈತಿಕತೆ ಪ್ರಜ್ಞೆ ಪ್ರದರ್ಶಿಸಿದಂತಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net