ನೆಕ್ಕುಂಟಿ ನಾಗರಾಜ್ ಜಾಮೀನು ರದ್ದುಪಡಿಸಿ: ಹೈಕೋರ್ಟ್ ಇ.ಡಿ. ಅರ್ಜಿ

highcourt
Published on

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ನೆಕ್ಕುಂಟಿ ನಾಗರಾಜ್‌ಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ ಹಾಗೂ ನಾಗರಾಜ್‌ಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

ನಾಗರಾಜ್‌ಗೆ ಜಾಮೀನು ಮಂಜೂರು ಮಾಡುವಾಗ ವಿಚಾರಣಾ ನ್ಯಾಯಾಲಯ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡದೆ ಜಾಮೀನು ಮಂಜೂರು ಮಾಡಿದೆ. ಆದ್ದರಿಂದ 2024ರ ನ. 8ರಂದು ವಿಚಾರಣಾ ನ್ಯಾಯಾಲಯ ನಾಗರಾಜ್‌ಗೆ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು ಎಂದು ಜಾರಿ ನಿರ್ದೇಶನಾಲಯ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net