KSDL ಉತ್ಪನ್ನಗಳಿಗೆ ತಮನ್ನಾ ರಾಯಭಾರಿ ನೇಮಕ ರದ್ದುಗೊಳಿಸಿ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹ

dk - 2025-05-22T170918.756
Published on

ಬಾಲಿವುಡ್ ನಟಿ ತಮನ್ನಾ ಭಾಟಿಯಾಗೆ 6.2 ಕೋಟಿ ರೂ. ಕೊಟ್ಟು ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್(KSDL) ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ ಮತ್ತು ಬೇಜವಾಬ್ದಾರಿಯುತ ತೀರ್ಮಾನವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕಿಡಿ ಕಾರಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ಟಿ.ಎ.ನಾರಾಯಣಗೌಡ,'' 6.20 ಕೋಟಿ ರೂ.ಗಳ ಭಾರೀ ಮೊತ್ತವನ್ನು ವ್ಯಯಿಸಿ ನಟಿಯನ್ನು ನೇಮಕ ಮಾಡಿರುವ ಸರ್ಕಾರದ ನಿರ್ಧಾರದ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು ಸೋಪ್ಸ್ ಸಂಸ್ಥೆ ಸರ್ಕಾರದ ಸ್ವಾಮ್ಯದ ಕಂಪನಿ. ಅತ್ಯಂತ ಜನಪ್ರಿಯ ಬ್ರಾಂಡ್‌ಗಳಲ್ಲಿ ಒಂದಾಗಿದ್ದು, ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರಾಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ ಅವರೇ ಬೇಕಿತ್ತೆ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರವು 6.20 ಕೋಟಿ ರೂ. ಭಾರೀ ಮೊತ್ತವನ್ನು ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ. ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬಹುದಾಗಿತ್ತು. ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ ಎಂದಿದ್ದಾರೆ.

ಕನ್ನಡಿಗರ ಭಾವನೆಗಳಿಗೆ ಧಕ್ಕೆ?

ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ. ಸರ್ಕಾರ ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಪ್ರತಿನಿಧಿಸುವ ಕಂಪನಿಯು ಸ್ಥಳೀಯ ಪ್ರತಿಭೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು ಎಂದು ಆಗ್ರಹಿಸಿದ್ದಾರೆ.

ತಮನ್ನಾ ನೇಮಕ ರದ್ದುಗೊಳಿಸಿ

ಸರ್ಕಾರ ಕೂಡಲೇ ತಮನ್ನಾ ಬ್ರಾಂಡ್ ಅಂಬಾಸಿಡರ್ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು. ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಕನ್ನಡ ನಟಿಯರನ್ನು ಆಯ್ಕೆ ಮಾಡಬೇಕು. ಸರ್ಕಾರವು 6.20 ಕೋಟಿ ರೂ. ವೆಚ್ಚದ ಬಗ್ಗೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು. ಭವಿಷ್ಯದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಭಾಷೆಗೆ ಗೌರವ ನೀಡುವಂತಹ ನಿರ್ಧಾರಗಳನ್ನು ಮಾತ್ರ ತೆಗೆದುಕೊಳ್ಳುವಂತೆ ಖಾತರಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರ ಪ್ರತಿಭಟನೆಯನ್ನು ಮಾಡಲಿದೆ. ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡುವಂತೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net