

ಬೆಂಗಳೂರು: ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ. ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅನ್ನದಾತನ ಆತ್ಮಹತ್ಯೆ ಕುರಿತು ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.
ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ 'ಕರ್ನಾಟಕ ಮಾದರಿ'? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ ಎಂದು ಟೀಕಿಸಿದ್ದಾರೆ.
ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರ್ಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ಎಂದು ಸರ್ಕಾರವನ್ನು ಕೆಣಕಿದ್ದಾರೆ.
ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ?
ಎಂದು ಕೇಳಿದ್ದಾರೆ.
ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ. ಸರ್ಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.