

ಗುರುಗ್ರಾಮ: ನಿಂತಿದ್ದ ಕಾರಿಗೆ ಕ್ಯಾಂಟರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಹರಿಯಾಣದ ಗುರುಗ್ರಾಮ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಘಾಜಿಯಾಬಾದ್ ಮೂಲದ ಶತಾಕ್ಷಿ(26), ಪರೀಕ್ಷಾ(2), ಪರಿ(9 ತಿಂಗಳು), ವೇದಾಂಶ್(6 ತಿಂಗಳು) ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡವರನ್ನು ಪುಷ್ಪಾ(50), ರೇಣು(27), ಚಾರು(11), ಆರೋಹಿ(2) ಎಂದು ವರದಿಯಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಯೊಬ್ಬರು ಅಪಘಾತವು ಬುಧವಾರ ತಡರಾತ್ರಿ 12:30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ರಸ್ತೆ ಬದಿಯಲ್ಲಿ ಕಾರಿನ ಟೈರ್ ಬದಲಿಸುವ ವೇಳೆ ದೆಹಲಿ ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಒಂದು ಸ್ಯಾಂಟ್ರೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ನಂತರ ಕ್ಯಾಂಟರ್ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಗಾಯಾಳುಗಳನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿವಾಡಿಯಲ್ಲಿರುವ ಬಾಬಾ ಮೋಹನ್ ರಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.