ಜಾತಿಗಣತಿ: ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ CM ಸಿದ್ದರಾಮಯ್ಯ | Caste census

dk - 2025-04-30T191901.968
Published on

Caste census : ಜನಗಣತಿ ಜತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ಎಂದರು.

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ ಎಂದರು.

ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net