ಐಎನ್​ಡಿಐಎ ಸ್ನೇಹಿತನೊಟ್ಟಿಗೆ ಕಾವೇರಿ ಚರ್ಚೆ ಅಸಾಧ್ಯ! ಡಿಕೆಶಿ ಕೊಟ್ಟ ಕಾರಣವಿದು

Kaveri (1)
Published on

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಿಗೆ ಪ್ರಧಾನಿ ಮೋದಿಯವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ. ಕರ್ನಾಟಕಕ್ಕೆ ತೊಂದರೆ ಆಗಿರುವುದೇ ಇಂತಹ ನಾಯಕರಿಂದ ಎಂದು ಟೀಕಿಸಿದರು.

ಕೇಂದ್ರ ಪರಿಸರ ಇಲಾಖೆಯಿಂದ ಅನೇಕ ಕಾಮಗಾರಿಗೆ ನಿರಪೇಕ್ಷಣಾ ಪತ್ರ ತರಲು ಬಿಜೆಪಿ ಕೈಯಲ್ಲಿ ಆಗಿಲ್ಲ. ರಾಜ್ಯದ ಅಭಿವೃದ್ದಿಗೆ ಅವರಿಂದಲೇ ತೊಂದರೆ ಆಗುತ್ತಿದೆ. ನೀರಿನ ವಿಚಾರದಲ್ಲಿ ರಾಜಕಾರಣ ನಮಗೆ ಬೇಕಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎನ್ನುವುದು ನನ್ನ ಧೋರಣೆ. ಬಿಜೆಪಿಯವರು ನನಗೆ ಬೈಯಲಿ, ಉಗಿಯಲಿ, ಏನು ಬೇಕಾದರೂ ಹೇಳಲಿ, ನಾನು ರಾಜ್ಯದ ಹಿತಾಸಕ್ತಿಗೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಎಲ್ಲಾ ನದಿ ವ್ಯಾಜ್ಯಗಳು ಮೂರು ವರ್ಷಗಳಲ್ಲಿ ಇತ್ಯರ್ಥವಾಗಬೇಕು ಎಂದು ಕೇಂದ್ರ ಸರ್ಕಾರವೇ ಕಾನೂನು ಮಾಡಿದೆ. ಅವರೇ ಎರಡೂ ರಾಜ್ಯಗಳನ್ನು ಕೂರಿಸಿಕೊಂಡು ಸಮಸ್ಯೆ ಬಗೆಹರಿಸಬಹುದಲ್ಲವೇ? ಎಂಥೆಂತಹ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ, ಇದು ಆಗುವುದಿಲ್ಲವೇ? ಎಂದು ಪ್ರಶ್ನಿಸಿದರು.

ಐಎನ್​ಡಿಐಎ ಒಕ್ಕೂಟದ ಸಭೆ ಮಾಡುತ್ತಾರೆ, ನೀರಿನ ವಿಚಾರಕ್ಕೆ ಸಭೆ ನಡೆಸಲು ಆಗುವುದಿಲ್ಲವೇ ಎನ್ನುವ ಪ್ರತಿಪಕ್ಷಗಳ ಪ್ರಶ್ನೆಗೆ, ನಾವು ಎಲ್ಲಾ ಸಭೆ ಮಾಡಿದ್ದೇವೆ. ಆಯಾಯಾ ನಾಯಕರಿಗೆ ಅವರ ರಾಜ್ಯಗಳ ಹಿತಾಸಕ್ತಿ ಮುಖ್ಯ. ಮೇಲೆ ಕುಳಿತಿರುವ ಕೇಂದ್ರ ಸರ್ಕಾರಕ್ಕೆ ವಾಸ್ತವಾಂಶ ಗೊತ್ತಿದೆ. ಇಬ್ಬರನ್ನು ಕರೆಸಿ ಮಾತುಕತೆ ನಡೆಸಲಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net