

ನವದೆಹಲಿ: ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಬಿಆರ್ಎಸ್ ನಾಯಕಿ, ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕೆ. ಕವಿತಾ ಅವರನ್ನು ಸಿಬಿಐ ಗುರುವಾರ (ಏಪ್ರಿಲ್ 11) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯಾ ತನಿಖಾ ದಳ (CBI) ಬುಧವಾರ (ಏಪ್ರಿಲ್ 10) ದೆಹಲಿಯ ತಿಹಾರ್ ಜೈಲಿನಲ್ಲಿ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯದ ಅನುಮತಿ ಪಡೆದು ಸಿಬಿಐ ಕವಿತಾ ಅವರನ್ನು ವಶಕ್ಕೆ ಪಡೆದಿದೆ.
ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾರ್ಚ್ 15ರಂದು ಬಿಆರ್ಎಸ್ ನಾಯಕಿ ಕವಿತಾ ಅವರನ್ನು ವಿಚಾರಣೆ ನಡೆಸಿ ವಶಕ್ಕೆ ಪಡೆದಿತ್ತು. ದೆಹಲಿ ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ಕವಿತಾ ಅವರು 100 ಕೋಟಿ ರೂಪಾಯಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.