ಸ್ವಾತಂತ್ರೃ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ

01 HANUR 2
ಹನೂರಿನಲ್ಲಿ ಸ್ವಾತಂತ್ರ್ಯ ದಿನ ಆಚರಣೆ ಸಂಬಂಧ ಶಾಸಕ ಎಂ.ಆರ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಕೆ.ಎನ್.ಚೈತ್ರಾ, ಉಮೇಶ್, ಗುರುಲಿಂಗಯ್ಯ, ಡಾ.ಪ್ರಕಾಶ್ ಇತರರು ಇದ್ದರು.
Published on

ಹನೂರು: ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವುದರ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಆಯೋಜಿಸಿದ್ದ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ತಾಲೂಕು ಕೇಂದ್ರದಲ್ಲಿ ಪ್ರತಿ ವರ್ಷದಂತೆಯೇ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಆದ್ದರಿಂದ ಅಯಾ ಇಲಾಖೆಯ ಅಧಿಕಾರಿಗಳಿಗೆ ವಹಿಸಿರುವ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಯಾವುದೇ ಲೋಪವಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಈ ದಿಸೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಆಗಮಿಸುವ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಶಾಮಿಯಾನ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಮಕ್ಕಳ ಭಾಗವಹಿಸುವಿಕೆ ಹೆಚ್ಚಾಗಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸುವ ಕೆಲಸವಾಗಬೇಕು. ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ತರುವುದಾದರೆ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣೆ ಸಮಿತಿಯ ಕಾರ್ಯದರ್ಶಿ ಬಿಇಒ ಗುರುಲಿಂಗಯ್ಯ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿದರು.

ಮ.ಬೆಟ್ಟದಲ್ಲಿ ಆ.7ಕ್ಕೆ ಕೆಡಿಪಿ ಸಭೆ: ಇನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆ.7 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಕೆಡಿಪಿ ಸಭೆ ನಡೆಯಲಿದೆ. ಆದ್ದರಿಂದ ಅಧಿಕಾರಿಗಳು ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಭೆಯಲ್ಲಿ ನಿಖರ ಮಾಹಿತಿ ಒದಗಿಸಬೇಕು. ಇನ್ನು ಮ.ಬೆಟ್ಟದ ಮಾರ್ಗದಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಚತುಷ್ಪಥ ರಸ್ತೆ ನಿರ್ಮಾಣ ಮಾಡುವ ಸಂಬಂಧ ಮ.ಬೆಟ್ಟ, ರಾಮಾಪುರ, ಹನೂರು ಹಾಗೂ ಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2023 ರಿಂದ 25ರವರೆಗೆ ನಡೆದಿರುವ ಅಪಘಾತಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಸಭೆಯಲ್ಲಿ ಪಪಂ ಉಪಾಧ್ಯಕ್ಷ ಆನಂದ್‌ಕುಮಾರ್, ಸದಸ್ಯರಾದ ಮಹೇಶ್, ಸೋಮಶೇಖರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ರಾಚಯ್ಯ, ತಹಸೀಲ್ದಾರ್ ಕೆ.ಎನ್.ಚೈತ್ರಾ, ಶಿರಸ್ತೇದಾರ್ ನಾಗೇಂದ್ರ, ತಾಪಂ ಇಒ ಉಮೇಶ್, ಟಿಎಚ್‌ಒ ಪ್ರಕಾಶ್, ಇನ್‌ಸ್ಪೆಕ್ಟರ್ ಆನಂದಮೂರ್ತಿ, ಸೆಸ್ಕ್ ಎಇಇ ರಂಗಸ್ವಾಮಿ, ನೀರಾವರಿ ನಿಗಮದ ಎಇಇ ಕರುಣಾಮಯಿ, ಆರ್‌ಐ ಶೇಷಣ್ಣ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net