

ನವದೆಹಲಿ: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸೆಲೆಕ್ಷನ್ (ಐಬಿಪಿಎಸ್) ಈಗಾಗಲೇ ಆರಂಭಿಸಿರುವ ಆಯ್ಕೆ ಪರೀಕ್ಷೆಯನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ. ಪರೀಕ್ಷೆಯನ್ನು ಯಾವ ಭಾಷೆಯಲ್ಲಿ ನಡೆಸಬೇಕೆಂಬ ಗೊಂದಲ ಪರಿಹರಿಸುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ತಿಳಿಸಿದೆ. ಭಾರತೀಯ ಸಂವಿಧಾನದಲ್ಲಿ 22 ಭಾಷೆಗಳಿಗೆ ಮಾನ್ಯತೆ ನೀಡಿದ್ದರೂ ಐಬಿಪಿಎಸ್, ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್ಬಿ) ಗುಮಾಸ್ತರ ವೃಂದ (ಕ್ಲರಿಕಲ್ ಕೇಡರ್) ನೇಮಕಕ್ಕೆ ಕೇವಲ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂಬ ವರದಿಗಳು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. 2019ರಲ್ಲಿ ಸ್ಥಳೀಯ ಭಾಷೆಗಳಲ್ಲೇ ಬ್ಯಾಂಕಿಂಗ್ ಪರೀಕ್ಷೆ ನಡೆಸುವ ಕುರಿತು ಕೇಂದ್ರ ಹಣಕಾಸು ಸಚಿವರು ಭರವಸೆ ನೀಡಿದ್ದ ಹೇಳಿಕೆಯನ್ನೂ ಈ ವರದಿಗಳಲ್ಲಿ ಉಲ್ಲೇಖಿಸಲಾಗಿತ್ತು ಎಂದು ಸಚಿವಾಲಯ ಹೇಳಿದೆ.
ಪ್ರಾದೇಶಿಕ ಭಾಷೆ ಆರ್ಆರ್ಬಿಗಳಿಗೆ: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ (ಆರ್ಆರ್ಬಿ) ಪರೀಕ್ಷೆ ಮಾತ್ರವೇ ಹಣಕಾಸು ಸಚಿವರ ಹೇಳಿಕೆ ಅನ್ವಯಿಸುತ್ತದೆ. ಸ್ಥಳೀಯ ಯುವಜನರಿಗೆ ಸಮಾನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಸರ್ಕಾರ 2019ರಲ್ಲಿ ಆರ್ಆರ್ಬಿಗಳ ಕಚೇರಿ ಸಹಾಯಕ ಮತ್ತು ಅಧಿಕಾರಿ ವೃಂದ-1 ಇವುಗಳ ನೇಮಕಾತಿಗೆ ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೆ, ಕೊಂಕಣಿ ಮತ್ತು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸಲು ತೀರ್ವನಿಸಿತ್ತು. ಅದರನ್ವಯ ಈ ನೇಮಕಾತಿಗಳಿಗೆ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲೂ ನಡೆಸಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಇತ್ಯರ್ಥಕ್ಕೆ ಸಮಿತಿ ರಚನೆ: ಸಾರ್ವಜನಿಕ ವಲಯದ ಬ್ಯಾಂಕುಗಳ ಗುಮಾಸ್ತರ ವೃಂದದ ನೇಮಕಾತಿಗೆ ಸ್ಥಳೀಯ/ಪ್ರಾದೇಶಿಕ ಭಾಷೆಗಳಲ್ಲೇ ಪರೀಕ್ಷೆಗಳನ್ನು ನಡೆಸಬೇಕೆಂಬ ಬೇಡಿಕೆಯ ಬಗ್ಗೆ ಸಮಗ್ರವಾಗಿ ಪರಿಶೀಲಿಸಲು ಸಮಿತಿಯೊಂದನ್ನು ಸರ್ಕಾರ ರಚಿಸಿದೆ. ಆ ಸಮಿತಿ 15 ದಿನಗಳೊಳಗೆ ಶಿಫಾರಸುಗಳನ್ನು ಸಲ್ಲಿಸಲಿದೆ. ಹಾಗಾಗಿ ಪ್ರಸ್ತುತ ಐಬಿಪಿಎಸ್ ಆರಂಭಿಸಿದ್ದ ಪರೀಕ್ಷಾ ಪ್ರಕ್ರಿಯೆಯನ್ನು ಸಮಿತಿ ಶಿಫಾರಸು ನೀಡುವವರೆಗೆ ತಡೆಹಿಡಿಯಲಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ತಿಳಿಸಿದೆ.
ಮಂಗಳವಾರ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿಯೇ ನಡೆಸುವ ಕುರಿತು ರ್ಚಚಿಸಲಾಯಿತು. ಈ ಉದ್ದೇಶಕ್ಕಾಗಿ ಸಮಿತಿ ರಚಿಸಿದ್ದು, ಆ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದರಿಂದ ಅಲ್ಲಿಯವರೆಗೆ ಆಯ್ಕೆ ಪರೀಕ್ಷೆಯನ್ನು ತಡೆ ಹಿಡಿಯಲಾಗುವುದು. ವಿತ್ತ ಸಚಿವರಿಗೆ ಧನ್ಯವಾದಗಳು. ಈಗಾಗಲೇ ಗ್ರಾಮೀಣ ಮತ್ತು ಪ್ರಾದೇಶಿಕ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಲಾಗುತ್ತಿದೆ. | ಪ್ರಲ್ಹಾದ ಜೋಶಿ ಕೇಂದ್ರ ಸಚಿವ
ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಕೇಂದ್ರ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಕನ್ನಡಿಗರಿಗೆ ನ್ಯಾಯದೊರಕಿಸಿಕೊಡಬೇಕು ಎಂದಿದ್ದಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಯಡಿಯೂರಪ್ಪನವರು ತಕ್ಷಣ ಪ್ರಧಾನಮಂತ್ರಿಯವರ ಗಮನಸೆಳೆದು ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಬೆದರಿದ ಇಲಿ: ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗಧರಿಂದ ಘೊಷಣೆ ಕೂಗಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆಬಿಟ್ಟ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ ಎಂದು ಕುಟುಕಿದ್ದಾರೆ.
ಬೆಂಗಳೂರು: ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿರುವ ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕ ನಾಡೋಜ ಡಾ. ಮಹೇಶ ಜೋಶಿ ಅವರು, ಅವಶ್ಯವಿದ್ದರೆ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧ ಎಂದು ತಿಳಿಸಿದ್ದಾರೆ.
ಕರ್ನಾಟಕದ ಹೆಮ್ಮೆಯ ಕೆನರಾ ಬ್ಯಾಂಕ್ ಸೇರಿದಂತೆ ಒಟ್ಟು 11 ಬ್ಯಾಂಕುಗಳಲ್ಲಿ ಖಾಲಿ ಇರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆಯನ್ನು ಕೇವಲ ಇಂಗ್ಲೀಷ್ ಮತ್ತು ಹಿಂದಿಯಲ್ಲಿ ನಡೆಸುವ ಮೂಲಕ ಕನ್ನಡಿಗರು ಉದ್ಯೋಗದಲ್ಲಿ ವಂಚಿತರಾಗುವುದನ್ನು ತಪ್ಪಿಸಬೇಕು. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಕನ್ನಡದಲ್ಲಿಯೂ ಪರೀಕ್ಷೆಯನ್ನು ನಡೆಸಿ ಕನ್ನಡಿಗರಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿಹಾಗೂ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ ಮುಖ್ಯಸ್ಥರನ್ನು ಅವರು ಒತ್ತಾಯಿಸಿದ್ದಾರೆ.
ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಆಳವಾದ ಅರಿವು ಹೊಂದಿದ್ದೇನೆ. ಒಂದು ವೇಳೆ ಕನ್ನಡದಲ್ಲಿ ಪರೀಕ್ಷೆ ನಡೆಸದಿದ್ದರೆ, ಕರ್ನಾಟಕದ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೂ ಏರಿ, ಕಾನೂನಾತ್ಮಕವಾಗಿ ಹೋರಾಟಕ್ಕೆ ಇಳಿಯಲಿದ್ದೇವೆ. ಈ ನಿಟ್ಟಿನಲ್ಲಿ ವಕೀಲರ ನೋಟಿಸನ್ನೂ ಸಹ ಕಳಿಸುವುದಾಗಿ ಹೇಳಿದ್ದಾರೆ.