

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ತಪ್ಪಿಸಲು ಸರ್ಕಾರದ ಬಹು ನಿರೀಕ್ಷಿತ ಸುರಂಗ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಆಸಕ್ತಿ ತೋರಿಸಿದೆ. ಇದೇ ವೇಳೆ ರಾಜ್ಯ ಸರ್ಕಾರ ಟನಲ್ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ.
ದೆಹಲಿ ಪ್ರವಾಸದಲ್ಲಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿಯನ್ನು ಅವರರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳ ಮಾಹಿತಿ ಹಂಚಿಕೊಂಡು ಚರ್ಚೆ ನಡೆಸಿದ್ದಾರೆ.
ನಂತರ ಸುದ್ದಿಗಾರರ ಜತೆ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಪ್ರಸ್ತಾಪ ಮಾಡಲಾಯಿತು. ಆಸಕ್ತಿ ತೋರಿಸಿರುವ ಕೇಂದ್ರ ಸರ್ಕಾರ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರವನ್ನು ಬರೆದಿದೆ. ಪ್ರಸ್ತಾವನೆಯ ಅಂತಿಮ ನಿರ್ಣಯವನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಬಂದು ಚರ್ಚೆ ನಡೆಸಬೇಕಾಗಿದೆ ಎಂದರು.
ಇದಲ್ಲದೆ, ರಾಜ್ಯದಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಲಾಯಿತು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಒಪ್ಪಂದವಾಗಿ ರಾಜ್ಯದ ವಿವಿಧ ಪ್ರದೇಶಗಳಲ್ಲಿ 42 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಪೈಕಿ 27 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ 15 ರಾಷ್ಟ್ರೀಯ ಹೆದ್ದಾರಿಗಳನ್ನು ಉನ್ನತೀಕರಿಸಬೇಕಾಗಿದೆ. ಈ ಬಗ್ಗೆ ಮಾಹಿತಿ ನೀಡಲಾಗಿದೆ.
ಶಿರಾಡಿಘಾಟ್‌ನಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಅನುಮತಿ ಅಗತ್ಯವಿದೆ. ಈ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಚರ್ಚಿಸಿ ಆನಂತರ ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದರು.