

ಬೆಂಗಳೂರು: ಸಿಇಟಿ ಪರೀಕ್ಷೆ ಇಂದು(ಗುರುವಾರ) ರಾಜ್ಯದೆಲ್ಲೆಡೆ ಆರಂಭವಾಗಿದೆ. ಒಟ್ಟು 1,94,356 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 497 ಕೇಂದ್ರಗಳಲ್ಲಿ ಎಕ್ಸಾಂ ನಡೆಯುತ್ತಿದೆ. ಕರೊನಾ ಸೋಂಕಿತ ವಿದ್ಯಾರ್ಥಿಗಳು ಪಿಪಿಇ ಕಿಟ್ ಧರಿಸಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದು, ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಬೆಂಗಳೂರಿನ ಮಲ್ಲೇಶ್ವರದ ಎಂಇಎಸ್ ಕಾಲೇಜು ಹಾಗೂ ಶೇಷಾದ್ರಿಪುರಂ ಕಾಂಪೋಸಿಟ್ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು. ಕೋವಿಡ್-19 ಹಿನ್ನೆಲೆಯಲ್ಲಿ ಕೈಗೊಂಡಿರುವ ಎಲ್ಲ ಎಚ್ಚರಿಕೆ ಕ್ರಮಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದರು. ಸಾರಿಗೆ, ಆರೋಗ್ಯ, ಪೊಲೀಸ್ ಮತ್ತು ಉನ್ನತ ಶಿಕ್ಷಣ ಇಲಾಖೆಗಳೆಲ್ಲ ಸೇರಿ ಕೈಗೊಂಡಿರುವ ಕ್ರಮಗಳ ಬಗ್ಗೆ ಡಿಸಿಎಂ ಮೆಚ್ವುಗೆ ವ್ಯಕ್ತಪಡಿಸಿದರು.
ಬೆಂಗಳೂರು ನಗರದ 83 ಕೇಂದ್ರಗಳಲ್ಲಿ, 40,200 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 12, ಬಳ್ಳಾರಿ 6, ಚಿತ್ರದುರ್ಗದಲ್ಲಿ ಒಬ್ಬರು ಸೇರಿದಂತೆ ರಾಜ್ಯದಾದ್ಯಂತ ಕರೊನಾ ಸೋಂಕಿತ 40 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.
ಜತೆಗೆ, ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರಲ್ಲದೆ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಬರಲು ಏನಾದರೂ ಸಮಸ್ಯೆ ಆಯತೇ? ಬಸ್ ವ್ಯವಸ್ಥೆ ಇತ್ತೆ? ಪರೀಕ್ಷಾ ಕೇಂದ್ರದಲ್ಲಿ ಎಲ್ಲ ರೀತಿಯ ಮಾರ್ಗದರ್ಶನ ಸಿಕ್ಕಿತೆ? ಎಂಬಿತ್ಯಾದಿ ಸಂಗತಿಗಳ ಬಗ್ಗೆ ಮಾಹಿತಿ ಪಡೆದರು.
ಕೋವಿಡ್-19 ಹಿನ್ನೆಲೆ ಹಾಗೂ ಹೈಕೋರ್ಟ್ ನೀಡಿರುವ ಸೂಚನೆಯ ಅನುಸಾರ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್ ಬಳಕೆ, ದೈಹಿಕ ಅಂತರ ಇತ್ಯಾದಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳನ್ನು ಕೂರಿಸಲಾಗಿದೆ. ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರತ್ಯೇಕ ಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಈ ವರ್ಷ ಫಲಿತಾಂಶ ಬಂದ ನಂತರ ಕೌನ್ಸೆಲಿಂಗ್ ಸೇರಿ ಎಲ್ಲ ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ಆನ್ಲೈನ್ನಲ್ಲೇ ನಡೆಸಲಾಗುವುದು. ವಿದ್ಯಾರ್ಥಿ ಮತ್ತು ಪೋಷಕರು ಸಿಇಟಿ ಘಟಕಕ್ಕೆ ಬರುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ಕಾಲೇಜನ್ನು ಆಯ್ಕೆ ಮಾಡಿಕೊಂಡ ಮೇಲೆ ನೇರವಾಗಿ ಕಾಲೇಜಿಗೆ ಹೋಗಿ ಪ್ರವೇಶ ಪಡೆಯಬಹುದು ಎಂದು ಡಿಸಿಎಂ ಹೇಳಿದರು.