ಮತ್ತೆ ಹೈ ಅಂಗಳಕ್ಕೆ ಸಿಇಟಿ ರ‍್ಯಾಂಕಿಂಗ್; ಪಟ್ಟಿ ಪರಿಷ್ಕರಣೆಯ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಲು ತೀರ್ಮಾನ

high court
Published on

ಬೆಂಗಳೂರು: ಪುನರಾವರ್ತಿತ ವಿದ್ಯಾರ್ಥಿಗಳ ಶೇ.50 ಪಿಯು ಅಂಕಗಳನ್ನು ಸಿಇಟಿ ರ್ಯಾಂಕಿಂಗ್​ಗೆ ಪರಿಗಣಿಸಬೇಕೆಂಬ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ.

ರ್ಯಾಂಕ್ ಪಟ್ಟಿ ಪರಿಷ್ಕರಣೆ ಕುರಿತು ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಚರ್ಚೆ ನಡೆಸಲು ಸೋಮವಾರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ.ಮಹೇಶ್, ಕಾಲೇಜು ಮತ್ತು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಸೇರಿದಂತೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸಚಿವರು ಈ ನಿರ್ಧಾರ ಪ್ರಕಟಿಸಿದ್ದಾರೆ.

ಕೋರ್ಟ್ ತೀರ್ಪನ್ನು ಪಾಲಿಸಲು ಮುಂದಾದರೆ ಈ ವರ್ಷ ಸಿಇಟಿ ಬರೆದಿರುವ 1.50 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಅವರ ರ್ಯಾಂಕಿಂಗ್​ನಲ್ಲಿ ದೊಡ್ಡ ಪ್ರಮಾಣದಲ್ಲಿ ಏರುಪೇರಾಗುತ್ತದೆ. ಕೋರ್ಟ್ ಮೆಟ್ಟಿಲೇರಿದ್ದವರು ಯಾವುದೋ ಒಂದು ತಾಂತ್ರಿಕ ಅಂಶಕ್ಕೆ ಅಂಟಿಕೊಂಡಿದ್ದಾರೆ. ಕಳೆದ ವರ್ಷ ಕರೊನಾ ಹಿನ್ನೆಲೆಯಲ್ಲಿ ಕೈಗೊಂಡ ತೀರ್ವನವನ್ನು ಅವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿತ್ತು. ಪುನರಾವರ್ತಿತ ವಿದ್ಯಾರ್ಥಿಗಳ ಬಗ್ಗೆ ನನಗೆ ಅಸಮಾಧಾನವೇನಿಲ್ಲ. ನಾವು ಯಾರಿಗೂ ಅನ್ಯಾಯವಾಗದಂತೆ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಎಲ್ಲವೂ ನಿಗದಿತ ಕಾಲಮಿತಿಯಲ್ಲೇ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net