

ಚಾಮರಾಜನಗರ: ಬಿಜೆಪಿ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮತದಾರ ಚೇತನ ಮಹಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎನ್.ಮಹೇಶ್ ಮಾಹಿತಿ ನೀಡಿದರು.
ಮುಂಬರುವ ಲೋಕಸಭಾ ಚುನಾವಣೆಗೆ ದೋಷರಹಿತ ಮತದಾರರ ಪಟ್ಟಿಯನ್ನು ಮಾಡಲು ಚುನಾವಣಾ ಆಯೋಗ ಮುಂದಾಗಿದೆ. ಇದರ ಜತೆಗೆ ಬಿಜೆಪಿ ಸಹ ಕೈ ಜೋಡಿಸಿ 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯನ್ನು ಮತದಾರರ ಪಟ್ಟಿಗೆ ಸೇರಿಸಿ, ನಕಲಿ ಮತದಾರರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಮಹಾ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆ ನೀಡಿದ್ದು, ರಾಜ್ಯ ಮಟ್ಟದಲ್ಲಿ ಐದು ತಂಡಗಳನ್ನು ರಚಿಸಿದೆ. ಜಿಲ್ಲಾ ಮಟ್ಟದಲ್ಲಿ ಮೂರು ತಂಡಗಳು, ಆಯಾ ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಮೂರು ತಂಡಗಳನ್ನು ರಚಿಸಿ ಅದನ್ನು ಶಕ್ತಿ ಕೇಂದ್ರದ ಮಟ್ಟಕ್ಕೆ ವಿಸ್ತರಣೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಚೂಡಾ ಮಾಜಿ ಅಧ್ಯಕ್ಷ ಎಸ್.ಬಾಲಸುಬ್ರಹ್ಮಣ್ಯಂ, ನೂರೊಂದುಶೆಟ್ಟಿ ಹಾಗೂ ಹಂಗಳ ಪ್ರಣಯ್ ನೇತೃತ್ವದಲ್ಲಿ ತಂಡಗಳನ್ನು ರಚಿಸಿದ್ದು, ಚುನಾವಣಾ ಆಯೋಗ ನಿಗದಿಪಡಿಸಿದ ದಿನಾಂಕಗಳಲ್ಲಿ ದೋಷರಹಿತ ಮತದಾರರ ಪಟ್ಟಿಯನ್ನು ಮಾಡಲು ಹಾಗೂ ಯುವ ಜನತೆ ಮತದಾರರ ಪಟ್ಟಿಯಿಂದ ದೂರ ಉಳಿಯದಂತೆ ಮುಂಜಾಗ್ರತಾ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಯ ಅನೇಕ ನಾಯಕರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ನಾನೇ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಅಂತಹ ಆಕಾಂಕ್ಷಿಗಳು ಬಿಜೆಪಿ ವರಿಷ್ಠರ ಬಳಿ ಇದರ ಬಗ್ಗೆ ಹೇಳಿಕೊಳ್ಳಬೇಕು. ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಆದ್ದರಿಂದ ಆಕಾಂಕ್ಷಿಗಳು ಮಾಧ್ಯಮಗಳಲ್ಲಿ ಹೇಳಿಕೆ ನೀಡಿ ಸಾರ್ವಜನಿಕರಲ್ಲಿ ಗೊಂದಲ ಉಂಟು ಮಾಡಬಾರದು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಮಾಜಿ ಶಾಸಕ ಸಿ.ಎಸ್.ನಿರಂಜನ್‌ಕುಮಾರ್, ಎಸ್.ಬಾಲರಾಜು, ಮುಖಂಡ ಡಾ.ಎ.ಆರ್.ಬಾಬು, ವಕ್ತಾರ ಅಯ್ಯನಪುರ ಶಿವಕುಮಾರ್ ಹಾಜರಿದ್ದರು.