

ಚಾಮರಾಜನಗರ: ನಾಡಹಬ್ಬ ದಸರಾ ಮಹೋತ್ಸವ ಮುಗಿಯುತ್ತಲೇ ನ.1 ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಕನ್ನಪರ ಸಂಘಟನೆಗಳ ಮುಖಂಡರು ಈ ಬಾರಿಯ ರಾಜೋತ್ಸವ ಆಚರಣೆಗೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ನ.1 ರಂದು ಜಿಲ್ಲಾಡಳಿತದಿಂದ ಆಚರಿಸುವ ಕನ್ನಡ ರಾಜೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಹಾಗೂ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಉದ್ಯಾನದಲ್ಲಿರುವ ಶ್ರೀ ಭುವನೇಶ್ವರಿ ವಿಗ್ರಹಕ್ಕೆ ಮಾಲಾರ್ಪಣೆ ಮಾಡಬೇಕು ಎಂದು ಕನ್ನಡಪರ ಹೋರಾಟಗಾರ ಚಾ.ಗು.ನಾಗರಾಜ್ ಒತ್ತಾಯಿಸಿದ್ದಾರೆ.
ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಸುವರ್ಣ ಸಂಭ್ರಮ ಎಂದು ಆಚರಣೆ ಮಾಡುತ್ತಿರುವ ಉದ್ದೇಶದಿಂದ ಕನ್ನಡದ ಶ್ರೀ ಭುನೇಶ್ವರಿ ಭಾವಚಿತ್ರವನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಬೇಕು. ಬಹಳ ಸಡಗರ ಮತ್ತು ಸಂಭ್ರಮದಿಂದ ಅರ್ಥಪೂರ್ಣವಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಬೇಕು, ಕನ್ನಡಪರ ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮವನ್ನು ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಅ.27 ರಂದು ಸಂಘಟನೆಗಳ ಸಭೆ:
ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿರುವ ರಾಜ್ಯದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಅ.27 ರಂದು ಎಲ್ಲಾ ಕನ್ನಡಪರ ಸಂಘಟನೆಗಳ ಸಭೆ ಕರೆಯಲಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ಪ್ರಾರಂಭವಾಗಲಿದ್ದು, ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆ ಅಧ್ಯಕ್ಷರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ್‌ಗೌಡ ಮನವಿ ಮಾಡಿದ್ದಾರೆ. ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಅ.28 ರಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಕರೆಯಲಾಗಿದೆ. ಈ ಕುರಿತು ಚರ್ಚಿಸುವ ಸಲುವಾಗಿ ಹಾಗೂ ಸುವರ್ಣ ಸಂಭ್ರಮ ಆಚರಣೆ ಮಾಡುವ ಉದ್ದೇಶದಿಂದ ಕನ್ನಡಪರ ಸಂಘಟನೆಗಳ ಸಭೆ ಕರೆಯಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಂ.ಮಾದೇವ ಶೆಟ್ಟಿ, ರಾಜು, ಪುರುಷೋತ್ತಮ್, ಚಾ.ಗು.ನಾಗರಾಜ್, ಜಗದೀಶ್, ಬಂಗಾರ ನಾಯಕ, ತಾಂಡವಮೂರ್ತಿ ಹಾಗೂ ಇತರರು ಹಾಜರಿದ್ದರು.