ಅಂಗವಿಕಲರನ್ನು ಮುಖ್ಯವಾಹಿನಿಗೆ ಕರೆತನ್ನಿ

05chn7
Published on

ಚಾಮರಾಜನಗರ : ಜಿಲ್ಲೆಯಲ್ಲಿ ಅಂಗವಿಕಲರ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಶ್ರಮಿಸಬೇಕಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶೆ ಬಿ.ಎಸ್.ಭಾರತಿ ಹೇಳಿದರು.

ನಗರದ ನ್ಯಾಯಾಲಯ ರಸ್ತೆಯಲ್ಲಿರುವ ಮೊಬಿಲಿಟಿ ಇಂಡಿಯಾ ಸಂಸ್ಥೆಯ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಅಂಗವಿಕಲರು, ಹಿರಿಯ ನಾಗರಿಕರು ಮತ್ತು ಬುದ್ಧಿಮಾಂದ್ಯ ಮಕ್ಕಳಿಗೆ ಅಗತ್ಯವಿರುವ ವಿವಿಧ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮೊಬಿಲಿಟಿ ಸಂಸ್ಥೆಯು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಲಕರಣೆಗಳನ್ನು ವಿತರಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಮುಂದಿನ ದಿನಗಳಲ್ಲಿ ಅಂಗವಿಕಲರ ಅಭಿವೃದ್ಧಿಗಾಗಿ ಒಗ್ಗೂಡಿ ಕಾರ್ಯನಿರ್ವಹಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ 50 ಅಂಗವಿಕಲರು ಮತ್ತು ಹಿರಿಯ ನಾಗಕರಿಗೆ ಶೌಚಗೃಹ ಕುರ್ಚಿ, ಮೊನಕೈ ಊರುಗೋಲು, ಕಂಕಳು ಊರುಗೋಲು, ವಾಕಿಂಗ್ ಸ್ಟಿಕ್, ಕೇನ್ ವಾಕರ್ ಮತ್ತು 8 ಬುದ್ಧಿಮಾಂದ್ಯ ಮಕ್ಕಳಿಗೆ ನಿತ್ಯ ಚಟುವಟಿಕೆಗೆ ಪೂರಕವಾದ ಕಿಟ್‌ಗಳನ್ನು ವಿತರಣೆ ಮಾಡಲಾಯಿತು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ, ಅಂಗವಿಕಲರ ಕಲ್ಯಾಧಿಕಾರಿ ಸುರೇಶ್, ಮೊಬಿಲಿಟಿ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಎಸ್.ಎನ್.ಆನಂದ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಸಮನ್ವಯ ಸಂಪನ್ಮೂಲ ಶಿಕ್ಷಕ ಉಮೇಶ್, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಕೃಷ್ಣಮೂರ್ತಿ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ರಾಜೇಶ್, ಮೊಬಿಲಿಟಿ ಇಂಡಿಯಾ ಸಂಸ್ಥೆಯ ಸಂಯೋಜಕ ರಾಜಣ್ಣ, ಪ್ರೋಸ್ಥೆಟಿಕ್ಸ್ ಮತ್ತು ಆರ್ಥೋಟಿಕ್ಸ್ ತಂತ್ರಜ್ಞ ಕುಮಾರ್, ಮಂಜುಳಾ, ರಾಜು, ಅನುಪಮಾ, ನಾಗಮ್ಮ, ರೇಷ್ಮಾ, ನಂದ, ಮಹದೇವಸ್ವಾಮಿ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net