ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಬಿಂದಿಗೆ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರೈತರ ಜೀವನಾಡಿಯಾದ ಕಾವೇರಿ ನೀರನ್ನು ಸಂರಕ್ಷಣೆ ಮಾಡಬೇಕು. ಮಳೆ ಅಭಾವದಿಂದ ರಾಜ್ಯದಲ್ಲಿ ಜಲಾಶಯಗಳು ಬರಿದಾಗುತ್ತಿದ್ದು, ಬೆಳೆಗಳು ಸಂಪೂರ್ಣ ಒಣಗುತ್ತಿವೆ. ರಾಜ್ಯದಲ್ಲಿ ನೀರಿನ ಅಭಾವ ಇದ್ದು, ಮುಂದಿನ ದಿನಗಳಲ್ಲಿ ತೀವ್ರ ಬರಗಾಲ ಬರಲಿದೆ. ಹೀಗಾಗಿ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡು ತಮಿಳುನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್ಗೋಪಾಲ್, ಗು.ಪುರುಷೋತ್ತಮ್, ಸಾಗರ್ ರಾವತ್, ವೀರಭದ್ರ, ತಾಂಡವಮೂರ್ತಿ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net