ಚಾಮರಾಜನಗರ: ತಾಲೂಕಿನ ಹೆಬ್ಬಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡುಗೆ ಸಹಾಯಕಿ ಪುಷ್ಪಾ ಅವರನ್ನು ಸ್ಥಳೀಯ ಆಯ್ಕೆ ಸಮಿತಿ ಮಂಗಳವಾರ ಕೆಲಸದಿಂದ ವಜಾಗೊಳಿಸಿದೆ.
ಹೆಬ್ಬಸೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಷ್ಪಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕರ ಜತೆಗೆ ದುರ್ವರ್ತನೆ ತೋರುತ್ತಾರೆ ಎಂದು ಆರೋಪಿಸಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಸೋಮವಾರ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಭೆ ನಡೆಸಿ, ಅಡುಗೆ ಸಹಾಯಕಿಯನ್ನು ವಜಾಗೊಳಿಸಲು ಸ್ಥಳೀಯ ಆಯ್ಕೆ ಸಮಿತಿ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಇದರ ಬೆನ್ನಲ್ಲೇ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಮುಖ್ಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರನ್ನು ಒಳಗೊಂಡ ಆಯ್ಕೆ ಸಮಿತಿ ತೀರ್ಮಾನದಂತೆ ಅಡುಗೆ ಸಹಾಯಕಿ ಪುಷ್ಪಾ ಅವರನ್ನು ಕೆಲಸದಿಂದ ವಜಾಗೊಳಿಸಿದೆ.
ಈ ಸಂಬಂಧ ಬುಧವಾರ ಶಾಲೆಯ ಆವರಣದಲ್ಲಿ ಸಭೆ ಕರೆಯಲಾಗಿದ್ದು, ಅಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಇಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಒಬ್ಬರನ್ನು ವಜಾಗೊಳಿಸಿದರೆ ಒಬ್ಬರೇ ಕೆಲಸ ನಿರ್ವಹಿಸಲು ಕಷ್ಟವಾಗುತ್ತದೆ. ಮುಂದಿನ ಸಾಲಿನಲ್ಲಿ ಹೊಸಬರನ್ನು ಆಯ್ಕೆ ಮಾಡಿಕೊಳ್ಳುವಂತೆ ಕ್ರಮವಹಿಸಲಾಗಿದೆ. ಒಟ್ಟಾರೆಯಾಗಿ ಈ ಪ್ರಕರಣ ಸುಖಾಂತ್ಯ ಕಂಡಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮಧು ಅವರು ವಿಜಯವಾಣಿಗೆ ಮಾಹಿತಿ ನೀಡಿದರು.