

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷೆ ಕೆ.ಸುಜಾತಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಆಪ್ತ ಸಹಾಯಕರ ಮೂಲಕ ಸಂಸದರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಮಾತನಾಡಿ, ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿರುವ ಯೋಜನೆಗಳಾದ ಐಸಿಡಿಎಸ್, ಎನ್‌ಎಚ್‌ಎಂ, ಐಸಿಪಿಎಸ್, ಎಸ್‌ಎಸ್‌ಎ, ಎಂಎನ್‌ಆರ್‌ಇಜಿ ಮುಂತಾದ ಯೋಜನೆಗಳನ್ನು ಕಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು. ಭಾರತೀಯ ಕಾರ್ಮಿಕ ಸಮ್ಮೇಳನ ಶಿಫಾರಸಿನಂತೆ ಈ ಯೋಜನೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿ ಸೇರಿದಂತೆ 1 ಕೋಟಿ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯ ಕೊಟ್ಟು ನೌಕರರು ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.
3ರಿಂದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ನೀಡಲು ಕಾನೂನು ರೂಪಿಸಬೇಕು. ಎನ್‌ಇಪಿ ನಿಲ್ಲಿಸಬೇಕು. 49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು, 21 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರು, ಆಶಾ ಮತ್ತು ಇತರ ಸಿಬ್ಬಂದಿಗೆ 31 ಸಾವಿರ ರೂ. ಕನಿಷ್ಠ ವೇತನ, ನಿವೃತ್ತಿ ಸೌಲಭ್ಯ, ಕನಿಷ್ಠ 10 ಸಾವಿರ ರೂ. ಪಿಂಚಣಿ ಕೊಡಬೇಕು. ನಮ್ಮ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಖಜಾಂಚಿ ಜೆ.ಭಾಗ್ಯಾ, ಜಿಲ್ಲಾ ಪದಾಧಿಕಾರಿಗಳಾದ ಶಾಯಿದಬಾನು, ಪಾರ್ವತಮ್ಮ, ಶಾಂತಮ್ಮ, ಭಾಗ್ಯಾ, ಸುಜಿಯಾ, ತುಳಸಮ್ಮ, ಮೀನಾಕ್ಷಿ, ಗುರುಮಲ್ಲಮ್ಮ, ಜಯಮಾಲಾ, ಗುರುಲಿಂಗಮ್ಮ, ಸುಮಿತ್ರಾ, ಮರಿಯಮ್ಮ, ಸುನೀಲ್ ಇತರರು ಭಾಗವಹಿಸಿದ್ದರು.