

ಚಾಮರಾಜನಗರ: ಪರಿವರ್ತನೆ ಜಗದ ನಿಯಮ ಎಂದು ಹೇಳಲಾಗುತ್ತದೆ. ಈ ನಿಟ್ಟಿನಲ್ಲಿ ಪರಿವರ್ತನೆ ಆಗದಿದ್ದರೆ ಜಡತ್ವ ಅವರನ್ನು ಆವರಿಸುತ್ತದೆ ಎಂದು ಶಿರಸಿ ರಾಜಯೋಗ ಶಿಕ್ಷಣ ಕೇಂದ್ರದ ಹಿರಿಯ ರಾಜಯೋಗಿನಿ ಬ್ರಹ್ಮಕುಮಾರಿ ವೀಣಾಜಿ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಎಡಿಆರ್ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ಸಂಜೀವಿನಿ ಟ್ರಸ್ಟ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸಮಯದ ಕರೆ-ಸಕರಾತ್ಮಕ ಬದಲಾವಣೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಜಗತ್ತಿನಲ್ಲಿ ನೈತಿಕತೆ ಎಂಬುದು ಪ್ರತಿಯೊಬ್ಬರಲ್ಲೂ ತಳಮಟ್ಟಕ್ಕೆ ಕುಸಿದಿದೆ. ಎಲ್ಲೆಲ್ಲೂ ಮನೆಗಳು ಹಿರಿದಾಗುತ್ತಿದೆಯೇ ಹೊರತು ಮನಸ್ಸು ಸಂಕುಚಿತವಾಗುತ್ತಿದೆ. ಕ್ಷಣಿಕ ಸುಖಕ್ಕಾಗಿ ಮಾನವ ತಮ್ಮ ಜೀವನವನ್ನು ಆಳುಮಾಡಿಕೊಳ್ಳುತ್ತಿದ್ದಾನೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಸಕರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಆಗಿದ್ದಾಗ ಮಾತ್ರ ಎಲ್ಲರೂ ನೆಮ್ಮದಿಯ ಬದುಕನ್ನು ನಡೆಸಲು ಸಾಧ್ಯವಾಗುತ್ತದೆ ಎಂದರು.
ಜಗತ್ತು ಬಹಳ ವೇಗವಾಗಿ ಬದಲಾಗುತ್ತಿದೆ. ಆದರೆ ಅದನ್ನು ಸುಲಭವಾಗಿ ಸ್ವೀಕರಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಸಾಕಷ್ಟು ಬದಲಾವಣೆ ಕಂಡು ಬಂದರೂ ಇತ್ತೀಚೆಗೆ ಜಾತೀಯತೆ ಕಂಡುಬರುತ್ತಿದೆ. ಪೂಜೆ, ಪುನಸ್ಕಾರಗಳಲ್ಲಿ ಜಾತೀಯತೆ ವ್ಯಕ್ತವಾಗುತ್ತಿದೆ. ಇದರಿಂದಾಗಿ ವ್ಯಕ್ತಿ, ವ್ಯಕ್ತಿಗಳ ನಡುವೆ ಗೋಡೆ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್.ಭಾರತಿ ಮಾತನಾಡಿ, ಮನುಷ್ಯ ತನ್ನಲ್ಲಿರುವ ನಕರಾತ್ಮಕ ಅಂಶಗಳನ್ನು ಹೊರಹಾಕಿ ಸಕರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಉತ್ತಮ ಜೀವನ ನಡೆಸಲು ಪ್ರತಿಯೊಬ್ಬರೂ ಸಕರಾತ್ಮಕ ಅಂಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಸಂಚಾಲಕಿ ಬಿ.ಕೆ.ದಾನೇಶ್ವರಿ, ನ್ಯಾಯಾಧೀಶರಾದ ಬಿ.ಎಸ್.ಹೊನ್ನಸ್ವಾಮಿ, ಚಂಪಕಾ, ವೆಂಕಟೇಶ್, ಎನ್.ನಿವೇದಿತಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರದಾನ ಕಾರ್ಯದರ್ಶಿ ಎನ್.ಕೆ.ವಿರೂಪಾಕ್ಷಸ್ವಾಮಿ, ಜಂಟಿ ಕಾರ್ಯದರ್ಶಿ ಮಲ್ಲು ಇತರರು ಹಾಜರಿದ್ದರು.