ಜಿಲ್ಲಾ ಕೇಂದ್ರದಲ್ಲಿ ಟ್ರಾೃಕ್ಟರ್ ಪರೇಡ್ ನಾಳೆ

1- MAHESH PRABHU
Published on

ಚಾಮರಾಜನಗರ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಐತಿಹಾಸಿಕ ದೆಹಲಿ ರೈತ ಹೋರಾಟದ ಭರವಸೆಗಳ ಈಡೇರಿಕೆಗಾಗಿ ಆಗ್ರಹಿಸಿ ಜ.26 ರಂದು ಜಿಲ್ಲಾ ಕೇಂದ್ರದಲ್ಲಿ ಟ್ರಾೃಕ್ಟರ್ ಪರೇಡ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಹೇಶ್ ಪ್ರಭು ತಿಳಿಸಿದರು.

ನಗರದ ಸತ್ತಿ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಜ.26 ರಂದು ಬೆಳಗ್ಗೆ 11 ಗಂಟೆಗೆ ಟ್ರಾೃಕ್ಟರ್ ಪರೇಡ್ ಪ್ರಾರಂಭವಾಗುತ್ತದೆ. ಅಲ್ಲಿಂದ ಗುಂಡ್ಲುಪೇಟೆ ವೃತ್ತ, ದೊಡ್ಡಂಗಡಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, ಶ್ರೀಭುವನೇಶ್ವರಿ ವೃತ್ತ ಹಾಗೂ ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನದಲ್ಲಿ ಅಂತ್ಯಗೊಳ್ಳಲಿದೆ ಎಂದು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿದ್ದ ಕಾರ್ಪೋರೇಟ್ ಪರ ಹಾಗೂ ರೈತ ವಿರೋಧಿ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ರೈತರು ವರ್ಷಗಟ್ಟಲೇ ಹೋರಾಟ ನಡೆಸಿದ್ದರು. ಸತತ 13 ತಿಂಗಳು ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದ ರೈತರು ಕಡೆಗೂ ಹೋರಾಟದ ಮೂಲಕ ಕೇಂದ್ರ ಸರ್ಕಾರವನ್ನು ಮಣಿಸಿದ್ದರು. ಕನಿಷ್ಠ ಬೆಂಬಲ ಬೆಲೆ, ಎಂಎಸ್‌ಪಿ ಕಾಯ್ದೆ ಜಾರಿ ಹಾಗೂ ಇತರ ಹಕ್ಕೋತ್ತಾಯಗಳನ್ನು ಈಡೇರಿಸುವ ಬಗ್ಗೆ ಕೇಂದ್ರ ಸರ್ಕಾರ ಲಿಖಿತವಾದ ಭರವಸೆಯನ್ನು ನೀಡಿತ್ತು. ಆದರೆ ಈ ಭರವಸೆಗಳನ್ನು ಈಡೇರಿಸದೇ ರೈತ ಸಮುದಾಯಕ್ಕೆ ದ್ರೋಹವೆಸಗಿದೆ ಎಂದು ಕಿಡಿಕಾರಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಪೋರೇಟ್ ಪರವಾದ ಜನವಿರೋಧಿ ನೀತಿಯನ್ನು ಬಯಲುಗೊಳಿಸಲು ಪ್ರಜಾಪ್ರಭುತ್ವ ಗಣತಂತ್ರದ ಸಂವಿಧಾನ ರಕ್ಷಣೆಗಾಗಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ದೇಶದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜನತಾ ಗಣರಾಜ್ಯೋತ್ಸವ ಟ್ರಾೃಕ್ಟರ್ ಪೆರೇಡ್‌ಗೆ ಕರೆ ನೀಡಿದೆ. ಜಿಲ್ಲೆಯ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಇದಕ್ಕೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷರಾದ ಶಾಂತಮಲ್ಲಪ್ಪ, ಹೊನ್ನೂರು ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಮಹೇಶ್, ಮಹದೇವಸ್ವಾಮಿ, ಗೌಡೇಗೌಡ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net