

ಚಾಮರಾಜನಗರ: ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ ರಾಜ್ಯ ಸರ್ಕಾರದ ನಡೆ ಐತಿಹಾಸಿಕವಾಗಿದೆ ಎಂದು ಹರವೆ ಮಠದ ಪೀಠಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಗೌರವಾಧ್ಯಕ್ಷ ಶ್ರೀಸರ್ಪಭೂಷಣಸ್ವಾಮಿ ಬಣ್ಣಿಸಿದರು.
ವಿಶ್ವಗುರು ಬಸವಣ್ಣ ಅವರನ್ನು ರಾಜ್ಯಸರ್ಕಾರ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ೋಷಣೆ ಮಾಡಿರುವ ನಡೆ ಸ್ವಾಗತಾರ್ಹವಾಗಿದೆ. ಜಗತ್ತಿಗೆ ಅನುಭವ ಮಂಟಪದ ಮೂಲಕ ಮೊದಲ ಬಾರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರಿದ ಜಗಜ್ಯೋತಿ ಬಸವಣ್ಣ ಅವರಿಗೆ ಗೌರವಸಲ್ಲಿಸಿದಂತಾಗಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸಚಿವರಿಗೆ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಅಭಿನಂದನೆ ಸಲ್ಲಿಸಲಾಗುವುದು ಎಂದು ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತಮಿಳುನಾಡಿನಲ್ಲಿ ತಿರುವಳ್ಳುವರ್ ಅವರನ್ನು ಸಾಂಸ್ಕೃತಿಕ ನಾಯಕ ಎಂದು ೋಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಶಿವಾಜಿ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಕರೆದಿದ್ದಾರೆ. ರಾಜ್ಯ ಸರ್ಕಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ೋಷಣೆ ಮಾಡಿದರಷ್ಟೇ ಸಾಲದು, ಹಲವು ಸೌಲಭ್ಯ, ಸವಲತ್ತುಗಳನ್ನು ಒದಗಿಸಿ ಅನುಭವ ಮಂಟಪದ ಪರಿಕಲ್ಪನೆಯನ್ನು ಜೀವಂತವಾಗಿ ಇಟ್ಟುಕೊಳ್ಳುವಂತೆ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚಿಂತನೆ ನಡೆಸಿದಾಗ ಮಾತ್ರ ರಾಜ್ಯ ಸರ್ಕಾರದ ೋಷಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಉಪಾಧ್ಯಕ್ಷ ಜಿ.ಎಂ.ಪ್ರಭುಸ್ವಾಮಿ ಮಾತನಾಡಿ, ಇದೇ ಜ.27 ರಂದು ಮಹಾಸಭಾದ ವತಿಯಿಂದ ಶ್ರೀಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಜಯಂತೋತ್ಸವ, ಆನಗಲ್ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀಸಿದ್ದಮಲ್ಲೇಶ್ವರ ವಿರಕ್ತ ಮಠದ ಬಸವರಾಜಸ್ವಾಮಿ ಅನುಭವಮಂಟಪದಲ್ಲಿ ಸಂಜೆ.3 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಹರವೆ ವಿರಕ್ತ ಮಠದ ಪೀಠಾಧ್ಯಕ್ಷ ಶ್ರೀಸರ್ಪಭೂಷಣಸ್ವಾಮಿ ಸಾನಿಧ್ಯ ವಹಿಸುವರು. ಸಿದ್ದಮಲ್ಲೇಶ್ವರ ವಿರಕ್ತ ಮಠಾಧ್ಯಕ್ಷ ಶ್ರೀ ಚನ್ನಬಸವಸ್ವಾಮಿ, ಸೋಮಹಳ್ಳಿ ಮಠದ ಶ್ರೀಸಿದ್ದಮಲ್ಲಸ್ವಾಮಿ, ಸಾಲೂರು ಮಠದ ಶ್ರೀಶಾಂತಮಲ್ಲಿಕಾರ್ಜುನಸ್ವಾಮಿ, ಆಲಹಳ್ಳಿ ಮಠದ ಶ್ರೀಶಿವಕುಮಾರಸ್ವಾಮಿ, ಗೌಡಹಳ್ಳಿ ಮಠದ ಶ್ರೀಮರಿತೋಂಟದಾರ್ಯಸ್ವಾಮಿ ಭಾಗವಹಿಸುವರು. ಮರಿಯಾಲ ಮಠದ ಶ್ರೀಇಮ್ಮಡಿ ಮುರುಘರಾಜೇಂದ್ರಸ್ವಾಮಿ ಉಪನ್ಯಾಸ ನೀಡುವರು. ವಿಶೇಷ ಆಹ್ವಾನಿತರಾಗಿ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸನ್ನ, ರಾಜ್ಯ ಉಪಾಧ್ಯಕ್ಷೆ ಪರಿಮಳಾನಾಗಪ್ಪ, ಸದಸ್ಯ ಸುಜೇಂದ್ರ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಭಾಗವಹಿಸುವರು ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಡಿ.ಭೋಗಾಪುರ, ಬಸವರಾಜ್, ಪುರುಷೋತ್ತಮ್ ಹಾಜರಿದ್ದರು.