ಕಿಡಿಗೇಡಿಗಳನ್ನು ಬಂಧಿಸುವಂತೆ ಮನವಿ ಸಲ್ಲಿಕೆ

25chn2
Published on

ಚಾಮರಾಜನಗರ: ಕಲಬುರಗಿಯಲ್ಲಿ ಡಾ.ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಗುರುವಾರ ಮನವಿ ಸಲ್ಲಿಸಲಾಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡ ವೆಂಕಟರಮಣಸ್ವಾಮಿ(ಪಾಪು)ಮಾತನಾಡಿ, ಕಲ್ಬುರ್ಗಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪ್ರತಿಮೆ ಧ್ವಂಸ ಮಾಡಿ ಅವಮಾನಿಸಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ಅವರ ವಿರುದ್ಧ ರಾಷ್ಟ್ರ ನಾಯಕರ ಅಪಮಾನ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಎಸಗುವ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಪ್ರಕರಣಗಳು ನಡೆದಾಗ ರಾಜ್ಯ ಸರ್ಕಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಆಗದಂತೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಮೂಡ್ನಕೂಡು ಪ್ರಕಾಶ್ ಮಾತನಾಡಿ, ಡಾ.ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿ ಯಶಸ್ಸು ಕಂಡ ಮೇಲೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಭ್ರಮನಿರಸನಗೊಂಡಿದೆ. ಈಗ ಬಿಜೆಪಿಗೆ ಇರುವ ವರ್ಚಸ್ಸು ಸಹಿಸದೆ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿ, ದಲಿತರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆರೆಹಳ್ಳಿ ಮಹದೇವಸ್ವಾಮಿ, ಮುಖಂಡರಾದ ನಲ್ಲೂರು ಪರಮೇಶ್, ಶುಭೋದಯ ಸಿದ್ದರಾಜು, ಕಾಳಿಚರಣ್, ಹಂಸರಾಜು, ಗುರುಸಿದ್ದಯ್ಯ, ವೆಂಕಟೇಶ್, ಪ್ರಸನ್ನಕುಮಾರ್, ಬಂಗಾರು, ಶಿವರಾಮು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net