

ಹನೂರು: ಡಾ.ಅಂಬೇಡ್ಕರ್ ರಚಿಸಿರುವ ಸಂವಿಧಾನ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನದ ಆಶಯವನ್ನು ಪಾಲಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯಕ್ಕೂ ಮುನ್ನ ದೇಶದ ಸಂಸ್ಥಾನಗಳನ್ನು ಇಂಗ್ಲಿಷರು ಹಾಗೂ ರಾಜರು ಆಳ್ವಿಕೆ ನಡೆಸುತ್ತಿದ್ದರು. ಸ್ವಾತಂತ್ರ್ಯ ನಂತರ ಸ್ವಾಯತ್ತತೆ ಪಡೆದುಕೊಂಡಿತು. ಬಳಿಕ ಸಂವಿಧಾನ ರಚನಾ ಸಮಿತಿಯ ಮೂಲಕ ಅಂಬೇಡ್ಕರ್ ಅವರು 1950 ಜ.26ರಂದು ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದರು. ನಂತರ ದೇಶವು ಗಣತಂತ್ರ ವ್ಯವಸ್ಥೆಯನ್ನು ಅಳವಡಿಸಿಕೊಂಡು ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಮೂಲಕ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದರು.
ಸಂವಿಧಾನ ಅಂಗೀಕಾರದ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜ.26ರಂದು ದೇಶಾದ್ಯಂತ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಇದರಿಂದ ಗಣತಂತ್ರ ವ್ಯವಸ್ಥೆಯನ್ನು ಬಲಗೊಳಿಸಲು ಸ್ಫೂರ್ತಿದಾಯಕವಾಗಿದೆ. ದೇಶದಲ್ಲಿನ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾಗಿದ್ದು, ಇಲ್ಲಿನ ಕೆಲವು ಅಂಶಗಳನ್ನು ಇತರ ದೇಶಗಳೂ ಅಳವಡಿಸಿಕೊಂಡಿರುವುದು ಹೆಮ್ಮೆಯ ಸಂಗತಿ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನು ಪಾಲಿಸುವುದರ ಮೂಲಕ ಗಣತಂತ್ರ ವ್ಯವಸ್ಥೆಯನ್ನು ಬಲಪಡಿಸಬೇಕು. ಇದರಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶವು ವಿವಿಧ ಜಾತಿ, ಭಾಷೆ ಹಾಗೂ ಧರ್ಮಗಳನ್ನು ಒಳಗೊಂಡಿದ್ದು, ಏಕತೆ ಹೊಂದಿದೆ. ಜತೆಗೆ ದೇಶವು ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಂವಿಧಾನದಲ್ಲಿ ಅಡಕವಾಗಿರುವ ಅಂಶಗಳೇ ಕಾರಣ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸುವುದರ ಮೂಲಕ ಅದರ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಇದರಿಂದ ದೇಶ ಅಭಿವೃದ್ಧಿ ಸಾಧ್ಯ ಎಂದರು.
ಪ್ರತಿಮೆಗೆ ಮಾಲಾರ್ಪಣೆ:
ಕಾರ್ಯಕ್ರಮಕ್ಕೂ ಮುನ್ನ ಶಾಸಕ ಎಂ.ಆರ್. ಮಂಜುನಾಥ್ ಅವರು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ತೆರಳಿ ಪಟ್ಟಣದ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು. ನಿವೃತ್ತ ಸೈನಿಕರಾದ ಲೂಯಿಸ್ ಮತ್ತು ಗಂಗಾಧರ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪಪಂ ಸದಸ್ಯರಾದ ಗಿರೀಶ್, ಮಹೇಶ್, ಆನಂದ್, ಸಂಪತ್‌ಕುಮಾರ್, ಸುದೇಶ್, ಮಹೇಶ್‌ನಾಯ್ಕ, ಸೋಮಶೇಖರ್, ಪೂರ್ಣಿಮಾ, ತಾಪಂ ಇಒ ಉಮೇಶ್, ಬಿಇಒ ಶಿವರಾಜು, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ನಂಜಮಣಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದರಮ್ಮ, ಶಿಕ್ಷಣ ಸಂಯೋಜಕರಾದ ಕಿರಣ್‌ಕುಮಾರ್, ಕಂದವೇಲು, ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.