ಚಾಮರಾಜನಗರ: ತಾಲೂಕು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣೆಗೆ ಆಗ್ರಹಿಸಿ ಫೆ.9ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಚಾಮರಾಜನಗರ ತಾಲೂಕು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣಾ ಸಮಿತಿ ಸಂಚಾಲಕ ಅಯ್ಯನಪುರ ಶಿವಕುಮಾರ್ ತಿಳಿಸಿದರು.
ತಾಲೂಕಿನ ಚಂದಕವಾಡಿಯಿಂದ ಚಾಮರಾಜನಗರದವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬೆಳಗ್ಗೆ 10 ಗಂಟೆಗೆ ಚಂದಕವಾಡಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂಭಾಗ ಚಾಲನೆ ನೀಡಲಾಗುವುದು. ಅಲ್ಲಿಂದ ಚಾಮರಾಜನಗರಕ್ಕೆ ಪಾದಯಾತ್ರೆ ಮೂಲಕ ತೆರಳಲಾಗುವುದು. ರಾಮಸಮುದ್ರದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಆದಿಕರ್ನಾಟಕ ಅಭಿವೃದ್ಧಿ ಸಂಘದ ಕಟ್ಟಡದ ಬಳಿ ಸಭೆ ನಡೆಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಸದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ, ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ. ಪಾದಯಾತ್ರೆಯಲ್ಲಿ ಜನಾಂಗದ ಗಡಿಮನೆ, ಕಟ್ಟೆಮನೆ ಯಜಮಾನರು, ಅಂಬೇಡ್ಕರ್ ಯುವಕ ಸಂಘಗಳ ಪದಾಧಿಕಾರಿಗಳು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಸಭೆ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿಟ್ಟಿನಲ್ಲಿ ಈಗಾಗಲೇ ತಾಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿನ ಚಾವಡಿಗಳಲ್ಲಿ ಸಭೆ ನಡೆಸಿ ಅರಿವು ಮೂಡಿಸಲಾಗುತ್ತಿದೆ. ಕಳೆದ 18 ವರ್ಷಗಳಿಂದ ಅಧ್ಯಕ್ಷರಾಗಿರುವವರು ಇಲ್ಲಿತನಕ ಒಂದೂ ಸಭೆಯನ್ನು ಕರೆದಿಲ್ಲ. ಸಾಮಾನ್ಯ ಸಭೆ ನಡೆಸಿ ಲೆಕ್ಕಪತ್ರ ಮಂಡಿಸಿಲ್ಲ. ಇವರೇ ಮುಂದುವರಿದರೆ ಸಮುದಾಯದ ಆಸ್ತಿಗೆ ತೊಂದರೆ ಉಂಟಾಗುತ್ತದೆ ಎಂದು ದೂರಿದರು.
ಗೋಷ್ಠಿಯಲ್ಲಿ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ, ಮುಖಂಡರಾದ ಆರ್.ಮಹದೇವ್, ನಾಗವಳ್ಳಿ ನಾಗಯ್ಯ, ನಲ್ಲೂರು ಸೋಮೇಶ್ವರ್, ರಂಗಸ್ವಾಮಿ, ಕೃಷ್ಣ ಹಾಜರಿದ್ದರು.