

ಚಾಮರಾಜನಗರ : ದೇಶದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಗೊಳಿಸುವ ಹುನ್ನಾರ ನಡೆಯುತ್ತದೆ ಎಂದು ಮೈಸೂರು ಉರಿಲಿಂಗಿ ಪೆದ್ದಿಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ,ಎಸ್ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ 133ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಸಂವಿಧಾನಕ್ಕೆ ಧಕ್ಕೆಯನ್ನು ಉಂಟುಮಾಡುವ ಕೆಲಸ ಮಾಡಿದೆ. ಸಂವಿಧಾನದಲ್ಲಿ ಐಪಿಸಿ, ಸಿಆರ್‌ಪಿ ಸಕ್ಷನ್ ತೆಗೆದುಹಾಕಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ತಳಸಮುದಾಯದ ಜನರು ಮದ್ಯ, ಮೌಢ್ಯದಿಂದ ಹೊರಬರದಿದ್ದರೆ ಸಂಪೂರ್ಣ ನಾಶವಾಗಬೇಕಾಗುತ್ತದೆ ಎಂದರು.
ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮೀಸಲಾತಿ ಋಣದಿಂದ ನಾನು ಕೂಡ ಶಾಸಕನಾಗಿದ್ದೇನೆ. ಅವರ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುವ ಮೂಲಕ ಸಮಾಜಕ್ಕೆ ತಮ್ಮದೆ ಕೊಡುಗೆಯನ್ನು ನೀಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ತಿ.ನರಸೀಪುರ ಬೌದ್ಧವಿಹಾರದ ಬೋಧಿರತ್ನ ಬಂತೇಜಿ, ಜಿಲ್ಲಾ ಸಮಿತಿ ಅಧ್ಯಕ್ಷ ಎ.ಶಿವಣ್ಣ, ರಾಜ್ಯ ಉಪಾಧ್ಯಕ್ಷ ಪ್ರಕಾಶ್, ಪುಟ್ಟಸ್ವಾಮಿ, ಸಿಡಿಪಿಒ ಸಿ.ಇ.ನಂಜಮ್ಮಣಿ, ಸರ್ಕಾರಿ ಜಿಲ್ಲಾ ಎಸ್ಟಿ ನೌಕರರ ಸಂಘದ ಅಧ್ಯಕ್ಷ ಎಂ.ಶಿವಕುಮಾರ್, ಸಮನ್ವಯ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ.ಶಿವಕುಮಾರ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.