ಚಾಮರಾಜನಗರ: ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ನ.9 ರಂದು ಚಾಮರಾಜನಗರ ಜಿಲ್ಲಾ ಬೆಳ್ಳಿ ಹಬ್ಬ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ತಿಳಿಸಿದರು.
ಅಂದು ಬೆಳಗ್ಗೆ 10.30ಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಿಂದ ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನೊಳಗೊಂಡ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣಕ್ಕೆ ಕರೆ ತರಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಸಂಸದ ವಿ.ಶ್ರೀನಿವಾಸಪ್ರಸಾದ್ ಉದ್ಘಾಟನೆ ಮಾಡಲಿದ್ದು, ವಾಟಾಳ್ ಮಠದ ಡಾ.ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶ್ರೀ ಸಿದ್ದಮಲ್ಲೇಶ್ವರ ವಿರಕ್ತಮಠದ ಶ್ರೀ ಚೆನ್ನಬಸವಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಮರಿಯಾಲ ಮಠದ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಮುಖಂಡರಾದ ಉಡಿಗಾಲ ಕುಮಾರಸ್ವಾಮಿ, ಜಿ.ಎಂ.ಗಾಡ್ಕರ್, ವೆಂಕಟರಮಣಸ್ವಾಮಿ (ಪಾಪು), ಹೊನ್ನೂರು ಪ್ರಕಾಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದರು.
ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಗೌರವಾಧ್ಯಕ್ಷ ಶಾ.ಮುರುಳಿ, ಮುಖಂಡರಾದ ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ಚಾ.ರಾ.ಕುಮಾರ್, ಅರುಣ್‌ಕುಮಾರ್‌ಗೌಡ , ರವಿಚಂದ್ರ ಪ್ರಸಾದ್ ಕಹಳೆ ಸುದ್ದಿಗೋಷ್ಠಿಯಲ್ಲಿದ್ದರು.