ಮಕ್ಕಳ ಸಂವಾದ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ; ಶೇಖರಗೌಡ

19-RNR-04
Published on

ಹಾವೇರಿ: ಮಕ್ಕಳು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಹಾಗೂ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕ್ಕಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ನಗರದ ಗೆಳೆಯರ ಬಳಗ ಮಣಿಬಾಯಿ ಲೋಡಾಯ ಸಭಾಭವನದಲ್ಲಿ ಶನಿವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಏರ್ಪಡಿಸಿದ್ದ ಮಕ್ಕಳಿಂದ ಅಹವಾಲು ಸ್ವೀಕಾರ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಯಲ್ಲಿ ಅಥವಾ ಶಾಲೆಗೆ ಬರುವಾಗ ಅಥವಾ ಬೇರೆ ಸ್ಥಳಗಳಲ್ಲಿ ತಮಗೆ ಯಾವುದೇ ಕಿರುಕುಳ ಉಂಟಾದ ಮಾಹಿತಿ, ಬಾಲ್ಯ ವಿವಾಹವಾದ ಅಥವಾ ನಿಶ್ಚಯವಾದ ಕುರಿತು, 8 ಮತ್ತು 9ನೇ ತರಗತಿಯಲ್ಲಿ ಶಾಲೆ ಬಿಟ್ಟ ಮಕ್ಕಳು ಕಂಡುಬಂದಲ್ಲಿ ಕೂಡಲೆ ಉಚಿತ ಮಕ್ಕಳ ಸಹಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.

ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಶಾಲೆಯಲ್ಲಿ ಸಲಹಾ ಪೆಟ್ಟಿಗೆ ಅಳವಡಿಕೆ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದು, ಸಲಹಾ ಪೆಟ್ಟಿಗೆ ಹಾಕಿದ ಸಮಸ್ಯೆಗಳಿಗೆ ಪರಿಹಾರ ಒದಗಿಸಿರುವ ಕುರಿತು ಆಯಾ ಶಾಲಾ ಶಿಕ್ಷಕರೊಂದಿಗೆ ಮಾಹಿತಿ ಪಡೆದುಕೊಂಡರು. ವಿವಿಧ ಶಾಲೆಗಳಿಂದ ಆಗಮಿಸಿದ ಮಕ್ಕಳಿಂದ ಸ್ವೀಕರಿಸಲಾದ ಅಹವಾಲು ಹಾಗೂ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಮಕ್ಕಳಿಗೆ ತಿಳಿಸಿದರು.

ಹಿರಿಯ ದಿವಾಣಿ ನ್ಯಾಯಾಧೀಶ ಬಿ.ಆರ್​. ಮುತಾಲಿಕದೇಸಾಯಿ ಮಾತನಾಡಿ, ಸದೃಢ ರಾಷ್ಟ್ರ ನಿಮಾರ್ಣಕ್ಕೆ ಶಿಕ್ಷಣ ಬಹಳ ಮಹತ್ವದ ಪಾತ್ರವಹಿಸುತ್ತದೆ. ಹಾಗಾಗಿ ಯಾವುದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣ ಹಾಗೂ ಇತರ ಸಮಸ್ಯೆಗಳಿದ್ದರೆ ಜಿಲ್ಲಾ ಮಕ್ಕಳ ರಕ್ಷಣಾ ಟಕ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪಕಿರ್ಸಬಹುದು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಅವರು, ಶಿಕ್ಷಕರು ಮಕ್ಕಳ ಸಮಸ್ಯೆಗಳ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿ, ಆಯಾ ಶಾಲೆಗಳಲ್ಲಿ ಸಮಸ್ಯೆ ಪರಿಹರಿಸಬೇಕು ಎಂದು ಹೇಳಿದರು.

ವಿವಿಧ ಶಾಲೆಗಳ ಶಿಕ್ಷಕರು ಇತರರು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನರ್ಪೂಣ ಸಂಗಳದ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net