

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಈ ನಡುವೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 148ರ ಗಡಿ ದಾಟಿದೆ.
ಕವಾಡಿಗರಹಟ್ಟಿಯ ಮನೆಯಲ್ಲೇ ಪಾರ್ವತಮ್ಮ(75) ಸಾವನ್ನಪ್ಪಿದ್ದಾರೆ. 2ವರ್ಷದ ಹಿಂದೆ ಪಾರ್ವತಮ್ಮ ಪಾಶ್ವವಾಯುಗೆ ಒಳಗಾಗಿದ್ದರು. ಎರಡು ದಿನದಿಂದ ವಾಂತಿ, ಬೇಧಿ ಕಾಣಿಸಿಕೊಂಡಿತ್ತು. ಕುಟುಂಬಸ್ಥರೆಲ್ಲ ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದರು. ಇಂದು ಬೆಳಗ್ಗೆ 50 ವರ್ಷದ ರುದ್ರಪ್ಪ ಎಂಬುವವರು ಮೃತಪಟ್ಟಿದ್ದರು.
ಕಲುಷಿತ ನೀರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ ಆರ್.ಗಿರಡ್ಡಿ, ಕಿರಿಯ ಎಂಜಿನಿಯರ್ ಎಸ್.ಆರ್.ಕಿರಣ್ ಕುಮಾರ್ ಎಂಬುವರನ್ನು ಸೇವೆಯಿಂದ ಅಮಾನತುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗೆ ಆ.2ರಂದು ಸೂಚನೆ ನೀಡಿದ್ದರು.