

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖಾ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ವರ್ಗಾವಣೆ ಮಾಡಿದ ಬೆನ್ನಲ್ಲೇ ಭಾರತಿನಗರ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಕಡತಗಳನ್ನು ಸಿಐಡಿ ತನಿಖಾಧಿಕಾರಿಗೆ ವರ್ಗಾಯಿಸಿದ್ದರು. ಇದರ ಬೆನ್ನಲ್ಲೇ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಪಿ ವೆಂಕಟೇಶ್, ಡಿವೈಎಸ್ಪಿ ಉಮೇಶ್ ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹಿಂದಿನ ತನಿಖಾಧಿಕಾರಿ ಎಸಿಪಿ ಪ್ರಕಾಶ್ ರಾಥೋಡ್ ಸ್ಥಳದಲ್ಲಿ ಹಾಜರಿದ್ದು, ಘಟನೆ ಕುರಿತು ಸಿಐಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು.೧೫ರಂದು ರೌಡಿ ಶೀಟರ್ ಶಿವಪ್ರಕಾಶ್‌ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು. ಈ ಸಂಬಂಧ ಪ್ರಕರಣದ ದಾಖಲಿಸಿಕೊಂಡಿದ್ದ ಪೊಲೀಸರು ೧೬ ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜು ೫ನೇ ಆರೋಪಿಯಾಗಿದ್ದು, ಎರಡು ಬಾರಿ ವಿಚಾರಣೆ ಮಾಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಲುಕೌಟ್ ನೋಟಿಸ್ ಜಾರಿಗೊಳಿಸಲಾಗಿದೆ.
ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ:
ಈ ಮಧ್ಯೆ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರವು ಸಿಐಡಿಗೆ ತನಿಖೆಗೆ ಆದೇಶಿಸಿತ್ತು. ಹೀಗಾಗಿ ತನಿಖಾ ಅಖಾಡಕ್ಕೆ ಇಳಿದಿರುವ ಸಿಐಡಿ ಅಧಿಕಾರಿಗಳು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿಂದಿನ ತನಿಖಾಧಿಕಾರಿಯಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ. ಸದ್ಯ ೧೬ ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಶೀಘ್ರದಲ್ಲೇ ಸಿಐಡಿ ಅಧಿಕಾರಿಗಳು ಬಾಡಿ ವಾರೆಂಟ್ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.