ಜಿಟಿಡಿ ಮಾತನ್ನು ವಿಶ್ಲೇಷಿಸಿದ ಸಿಎಂ

siddaramaiah no bribe
Published on

ಬೆಂಗಳೂರು: ಮೈಸೂರು ದಸರಾ ವೇದಿಕೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಮ್ಮ ಕುರಿತಂತೆ ಆಡಿದ ಮಾತುಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಆ ಚರ್ಚೆಯನ್ನು ಮತ್ತಷ್ಟು ವಿಶ್ಲೇಷಿಸಿದ್ದಾರೆ.
ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ. ಅವರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ ಬೇರೆ ಪಕ್ಷದಲ್ಲಿರಬಹುದು. ಆದರೆ ಸತ್ಯ ಮತ್ತು ನ್ಯಾಯಕ್ಕೆ ಪಕ್ಷ ಇಲ್ಲ. ಅದು ವ್ಯಕ್ತಿಯ ಆತ್ಮಸಾಕ್ಷಿಗೆ ಸಂಬಂಧಿಸಿದ್ದು ಎಂದು ಸಿಎಂ ಹೇಳಿದ್ದಾರೆ.
ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡವನಲ್ಲ. ಬಿಜೆಪಿ ಮತ್ತು ಜೆಡಿಎಸ್‌ನಲ್ಲಿರುವ ಅನೇಕ ನಾಯಕರಿಗೆ ಜಿ.ಟಿ.ದೇವೇಗೌಡರು ಹೇಳಿರುವ ಸತ್ಯ ಗೊತ್ತಿದೆ. ಆದರೆ ತಮ್ಮ ಪಕ್ಷದ ಕೆಲವು ಹಿರಿಯ ನಾಯಕರ ಒತ್ತಡಕ್ಕೆ ಬಲಿಯಾಗಿ ಮೌನವಾಗಿದ್ದಾರೆ. ಅವರು ಕೂಡಾ ಮುಕ್ತವಾಗಿ ಮಾತನಾಡಬೇಕಾದ ಕಾಲ ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕೇ ವಿನಃ ಸುಳ್ಳು ಆರೋಪಗಳ ಮೂಲಕ ಹೆಣೆಯುವ ರಾಜಕೀಯ ಷಡ್ಯಂತ್ರದಿಂದ ಅಲ್ಲ. ಈ ಕೆಟ್ಟ ಪರಂಪರೆಯನ್ನು ತಡೆಗಟ್ಟಬೇಕಾದರೆ ನಮ್ಮ ರಾಜಕೀಯ ನಾಯಕರೆಲ್ಲರೂ ಪಕ್ಷಾತೀತವಾಗಿ ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವ ಧೈರ್ಯ ಮಾಡಬೇಕಾಗುತ್ತದೆ. ಈ ಮೂಲಕ ಕರ್ನಾಟಕದಿಂದ ಹೊಸ ರಾಜಕೀಯ ಪರಂಪರೆಗೆ ನಾಂದಿ ಹಾಡಬೇಕಾಗುತ್ತದೆ. ಸತ್ಯಮೇವ ಜಯತೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net