5 ಕೆಜಿ ಅಕ್ಕಿ ಜೊತೆಗೆ ಉಳಿದ 5 KG ಬೇಳೆ ಕಾಳು ಕೊಡಲು ತೀರ್ಮಾನ: CM ಸಿದ್ದರಾಮಯ್ಯ

Bbau (21)
Published on

ಬೆಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದು CM ಸಿದ್ದರಾಮಯ್ಯ ಹೇಳಿದರು.

ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು. ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದಿದ್ದೇನೆ. ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು.

ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net