

ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯದಲ್ಲಿ ತೈಲ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ 3 ರೂ. ಮತ್ತು ಡಿಸೇಲ್ ದರದಲ್ಲಿ 3.50 ರೂ. ಹೆಚ್ಚಳವಾಗಿದೆ. ರಾಜ್ಯದಲ್ಲಿ ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಜನಸಾಮಾನ್ಯರು ಆಡಳಿತರೂಢ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಇದನ್ನು ಶೀಘ್ರವೇ ಕಡಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದರ ಬೆನ್ನಲ್ಲೇ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ, "ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತುಪಡಿಸಿ ಇತರೆ ಯಾವುದೇ ಆದಾಯ ಮೂಲಗಳು ಉಳಿದಿಲ್ಲ" ಎಂದರು.
"ಈ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗದಂತೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದು, ಈ ಬದಲಾವಣೆಯ ನಂತರವೂ ದಕ್ಷಿಣ ಭಾರತದ ಇತರೆ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದಲ್ಲಿರುವ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ತೈಲ ಬೆಲೆ ಕಡಿಮೆಯಿದೆ" ಎಂದು ಹೇಳಿದ್ದಾರೆ.