ಕೋಮುಗಲಭೆ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಜತೆಗೆ ಒಬ್ಬರಿಗೆ ಸರ್ಕಾರಿ ಉದ್ಯೋಗ: ಸಿಎಂ ಭರವಸೆ

Siddaramaiah
Published on

ಬೆಂಗಳೂರು: ದ್ವೇಷ ಮತ್ತು ಹತ್ಯಾ ರಾಜಕಾರಣಕ್ಕೆ ಬಲಿಯಾದ ಆರು ಯುವಕರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್​ಗಳನ್ನು ವಿತರಿಸಿ, ಸಂತ್ರಸ್ತ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಬಳಿಕ ಸಿದ್ದರಾಮಯ್ಯ ಮಾತನಾಡುತ್ತಾ, ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಕೋಮು ಗಲಭೆಯಲ್ಲಿ ಮೃತಪಟ್ಟ ಹಿಂದುಗಳಿಗೆ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದರು. ಆದರೆ ದ್ವೇಷ ರಾಜಕಾರಣಕ್ಕೆ ಕೆಲ ಮುಸ್ಲಿಮರು ಕೂಡ ಜೀವ ಕಳೆದುಕೊಂಡಿದ್ದಾರೆ. ಸರ್ಕಾರ ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಹೇಳಿದರು.

ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಸಂವಿಧಾನ ವಿರೋಧಿ ತಾರತಮ್ಯ ನೀತಿಯನ್ನು ಅಳಿಸಿದ್ದೇವೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಬಿಜೆಪಿ ಸರ್ಕಾರ ಪ್ರವೀಣ್ ನೆಟ್ಟಾರು ಪತ್ನಿಗೆ ಕೆಲಸ ಕೊಟ್ಟಿದ್ದಾರೆ ಸರಿ. ಆದರೆ ನಮ್ಮ ಸರ್ಕಾರ ಆರು ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದು, ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸ ಕೊಡುತ್ತೇವೆ. ಬಿಜೆಪಿಯವರು ಮಾಡಿದ್ದ ತಾರತಮ್ಯವನ್ನು ನಾವು ನಿವಾರಿಸಿದ್ದೇವೆ ಎಂದು ಹೇಳಿದರು.

ಪ್ರತಿಯೊಂದು ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ, ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಕೊಡಿಸಲು ಕ್ರಮ ಕೈಗೊಳ್ಳುತ್ತೇವೆ. ಇನ್ನು ಮುಂದೆ ಅಸಹಜ ಸಾವು ಹಾಗೂ ಕೋಮು ಗಲಭೆಯಲ್ಲಿ ಯಾವ ಸಮುದಾಯದವರು ಕೂಡ ಜೀವ ಕಳೆದುಕೊಳ್ಳಬಾರದು. ನೈತಿಕ ಪೋಲಿಸ್ ಗಿರಿ ತಡೆದು, ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net